ಬೆಂಗಳೂರು: ಮಾಜಿ ಕೇಂದ್ರ ಸಚಿವ ಎಂ.ವಿ ರಾಜಶೇಖರನ್ ನಿಧನಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆ ಪ್ರತಿಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಡಿಸಿಎಂ ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲಿಂ ಅಹಮದ್, ಸತೀಶ್ ಜಾರಕಿಹೊಳಿ, ಮಾಜಿ ಸಚಿವರಾದ ಆರ್ ವಿ ದೇಶಪಾಂಡೆ ಎಚ್ಕೆ ಪಾಟೀಲ್ ಎಂಬಿ ಪಾಟೀಲ್ ಸೇರಿದಂತೆ ಹಲವು ನಾಯಕರು ರಾಜಶೇಖರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಎಂ.ವಿ.ರಾಜಶೇಖರನ್ ನಿಧನದಿಂದ ನಾವು ಒಬ್ಬ ಅನುಭವಿ ಮಾರ್ಗದರ್ಶಕನನ್ನು ಕಳೆದುಕೊಂಡಿದ್ದೇವೆ. ಕಾಂಗ್ರೆಸ್ ಪಕ್ಷದ ನಾಯಕರಾಗಿ, ಶಾಸಕ-ಸಂಸದರಾಗಿ, ಕೇಂದ್ರ ಸಚಿವರಾಗಿ ಅವರು ಸಲ್ಲಿಸಿರುವ ಸೇವೆ ಸದಾ ಸ್ಮರಣೀಯ. ಅವರ ಅಗಲಿಕೆಯ ದು:ಖದಲ್ಲಿರುವ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು ಎಂದಿದ್ದಾರೆ.
ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವೀಟ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದು, ಕಾಂಗ್ರೆಸ್ಸಿನ ಹಿರಿಯ ನಾಯಕ ಕೇಂದ್ರದ ಮಾಜಿ ಸಚಿವ ಎಂ.ವಿ.ರಾಜಶೇಖರನ್ ಅವರ ಸಾವು ಅತ್ಯಂತ ದುಃಖಕರ ಸಂಗತಿ. ಇವರ ಸಾವು ಪಕ್ಷಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಅವರ ಕುಟುಂಬದವರಿಗೆ ಬಂಧು ಮಿತ್ರರಿಗೆ ಅಪಾರ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿ ದೊರೆಯಲೆಂದು ಪ್ರಾರ್ಥನೆ. ಓಂ ಶಾಂತಿ ಎಂದಿದೆ.
ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಮ್ಮ ಟ್ವೀಟ್ ನಲ್ಲಿ, ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಹಿರಿಯ ಮುತ್ಸದ್ಧಿ ಎಂ.ವಿ.ರಾಜಶೇಖರ್ ಇವರು ನಿಧನರಾದರೆಂಬ ಸುದ್ದಿ ತಿಳಿದು ದುಃಖವಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಶ್ರೀಯುತರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ನೀಡಲಿ ಮತ್ತು ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.