ಬೆಂಗಳೂರು: ಕಾಂಗ್ರೆಸ್ ನಾಯಕರ ನಿಯೋಗವು ರಾಜಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ಕಾರ್ಯದರ್ಶಿಗಳಿಗೆ ಮನವಿ ಪತ್ರ ಸಲ್ಲಿಸಿತು.
ಕೇಂದ್ರ ಸರ್ಕಾರ ರಾಷ್ಟ್ರೀಯ ಕಾಂಗ್ರೆಸ್ ನಾಯಕರನ್ನು ಅನಗತ್ಯವಾಗಿ ಕಿರುಕುಳಕ್ಕೆ ಒಳಪಡಿಸುತ್ತಿದೆ. ವಿಚಾರಣೆ ನೆಪದಲ್ಲಿ ಹಿಂಸಿಸುತ್ತಿದೆ ಎಂದು ಆರೋಪಿಸಿ, ಕೆಪಿಸಿಸಿ ಕಚೇರಿಯಿಂದ ರಾಜಭವನಕ್ಕೆ ಪಾದಯಾತ್ರೆ ಮೂಲಕ ತೆರಳಿ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದರು. ಆದರೆ ಇಂಡಿಯನ್ ಎಕ್ಸ್ಪ್ರೆಸ್ ವೃತ್ತದಲ್ಲಿ ತಡೆದ ಪೊಲೀಸರು ಮುಂದೆ ತೆರಳಲು ಅವಕಾಶ ನೀಡದೆ ಅವರನ್ನು ವಶಕ್ಕೆ ಪಡೆದಿದ್ದರು. ಈ ಹಿನ್ನೆಲೆಯಲ್ಲಿ ರಾಜಭವನಕ್ಕೆ ತೆರಳಿ ಮನವಿ ಪತ್ರ ನೀಡಲು ಅವರಿಗೆ ಸಾಧ್ಯವಾಗಿರಲಿಲ್ಲ. ಆ ಕಾರಣಕ್ಕಾಗಿ ಕಾಂಗ್ರೆಸ್ ನಾಯಕರ ನಿಯೋಗವೊಂದು ರಾಜಭವನಕ್ಕೆ ತೆರಳಿ ಮನವಿ ಪತ್ರ ಸಲ್ಲಿಸಿ ಬಂದಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹಾಗೂ ಮಾಜಿ ಎಂಎಲ್ಸಿ ನಾರಾಯಣಸ್ವಾಮಿ ರಾಜಭವನಕ್ಕೆ ಭೇಟಿ ನೀಡಿ ಮನವಿ ಸಲ್ಲಿಸಿದರು. ಮನವಿ ಪತ್ರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಬಿ.ಕೆ ಹರಿಪ್ರಸಾದ್ ಸಹಿ ಮಾಡಿದ್ದಾರೆ.
ಸಲೀಂ ಅಹ್ಮದ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಕೇಂದ್ರ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣದ ಫಲವಾಗಿ ಜಾರಿ ನಿರ್ದೇಶನಾಲಯವು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ನಾಯಕ ರಾಹುಲ್ ಗಾಂಧಿ ಅವರಿಗೆ ಅನಗತ್ಯ ಕಿರುಕುಳ ನೀಡುತ್ತಿದೆ. ಜೊತೆಗೆ ದೆಹಲಿ ಪೊಲೀಸರ ದೌರ್ಜನ್ಯವನ್ನು ಖಂಡಿಸಿ ಇಂದು ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಯವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ನ ಮಾಜಿ ಮುಖ್ಯ ಸಚೇತಕರು ಹಾಗೂ ಕೆಪಿಸಿಸಿ ಉಪಾಧ್ಯಕ್ಷ ನಾರಾಯಣ ಸ್ವಾಮಿ ,ಪ್ರಧಾನ ಕಾರ್ಯದರ್ಶಿಗಳಾದ ಬಲರಾಜ್, ಮೆಹರೋಝ್ ಖಾನ್, ಸತ್ಯನಾರಾಯಣ ಮತ್ತಿತರರು ಉಪಸ್ಥಿತರಿದ್ದರು ಎಂದು ಹೇಳಿದ್ದಾರೆ.
ಇದನ್ನೂ ಓದಿ:ರೈತನೊಂದಿಗೆ ಉಡಾಫೆಯಾಗಿ ಮಾತನಾಡಿದರೇ ಸಚಿವ ಭಗವಂತ ಖೂಬಾ?: ಆಡಿಯೋ ವೈರಲ್