ಬೆಂಗಳೂರು:ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂಸಾಚಾರ ಆಗುತ್ತದೆ ಎಂದು ರಾಜ್ಯದ ಮತದಾರರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆದರಿಕೆ ಹಾಕಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿ ಬೆಂಗಳೂರಿನ ಹೈ ಗ್ರೌಂಡ್ಸ್ ಪೊಲೀಸರಿಗೆ ಗುರುವಾರ ದೂರು ಸಲ್ಲಿಸಿದರು. ಮತದಾರರಿಗೆ ಬೆದರಿಕೆ ಆರೋಪದ ಮೇಲೆ ಕೇಂದ್ರ ಸಚಿವ ಅಮಿತ್ ಶಾ ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಎಐಸಿಸಿ ವಕ್ತಾರ ಗೌರವ್ ವಲ್ಲಭ್ ಅವರು ದೂರು ಸಲ್ಲಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ವಿ ಸೋಮಣ್ಣ ವಿರುದ್ಧ ದೂರು ನೀಡಿರುವ ಕಾಂಗ್ರೆಸ್ ನಾಯಕರು, ವಿ ಸೋಮಣ್ಣ ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಗೆ ಬೆದರಿಕೆ ಹಾಗೂ ಆಮಿಷವೊಡ್ಡಿರುವ ವಿಚಾರ ಪ್ರಸ್ತಾಪಿಸಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಅಮಿತ್ ಶಾ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಾಟೆಗಳು, ಘರ್ಷಣೆಗಳು, ಗಲಭೆಗಳು ಹೆಚ್ಚಾಗುತ್ತವೆ ಎಂಬ ಹೇಳಿಕೆ ನೀಡಿದ್ದರು. ಇದನ್ನು ಖಂಡಿಸಿರುವ ಕಾಂಗ್ರೆಸ್ ನಾಯಕರು ಇಂದು ದೂರು ಸಲ್ಲಿಸಿ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಈ ಬಗ್ಗೆ ನಾಳೆ ಸಂಜೆ 4 ಗಂಟೆಗೆ ದೆಹಲಿಯಲ್ಲಿ ಚುನಾವಣಾ ಆಯೋಗವನ್ನು ಭೇಟಿ ಮಾಡುತ್ತೇವೆ ಎಂದು ದೂರು ಸಲ್ಲಿಕೆ ಬಳಿಕ ಮಾಧ್ಯಮಗಳಿಗೆ ಕಾಂಗ್ರೆಸ್ ನಾಯಕರು ಪ್ರತಿಕ್ರಿಯಿಸಿದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲ ಮಾತನಾಡಿ, ನಾವು ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಬಂದು, ಒಂದು ಪ್ರಮುಖ ವಿಚಾರವಾಗಿ ದೂರು ಸಲ್ಲಿಸಿದ್ದೇವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕ್ರಮ ಕೈಗೊಳ್ಳಬೇಕು. ಕೋಮು ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ. ಪ್ರಚಾರದ ವೇಳೆ ಸುಳ್ಳು ಹೇಳಿಕೆಗಳನ್ನೂ ಕೊಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಕೋಮು ಗಲಭೆ ಆಗುತ್ತೆ ಎಂದು ಪ್ರಚಾರದ ವೇಳೆ ಹೇಳಿಕೆ ಕೊಟ್ಟಿದ್ದಾರೆ ಎಂದು ದೂರಿದರು.