ಬೆಂಗಳೂರು:ಮುಖ್ಯಮಂತ್ರಿ ಹುದ್ದೆಗಾಗಿ ಪಟ್ಟು ಹಿಡಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಡುವೆ ಸಂಧಾನ ಮಾಡುವಲ್ಲಿ ಕಾಂಗ್ರೆಸ್ ಹೈಕಮಾಂಡ್ ಯಶಸ್ವಿಯಾಗಿದೆ ಎಂದು ಮೂಲಗಳು ತಿಳಿಸಿವೆ. ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ನೇಮಕ ಮಾಡುವ ಬಗ್ಗೆ ಹೈಕಮಾಂಡ್ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅಂತಿಮ ನಿರ್ಧಾರಕ್ಕೆ ಬರಲಾಗಿದೆ.
ಕಾಂಗ್ರೆಸ್ ಹೈಕಮಾಂಡ್ಗೆ ಜಟಿಲವಾಗಿ ಪರಿಣಮಿಸಿದ್ದ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಕಗ್ಗಂಟನ್ನು ಬಗೆಹರಿಸಿದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬೀಡುಬಿಟ್ಟಿದ್ದ ರಾಜ್ಯ ಕಾಂಗ್ರೆಸ್ ಮುಖಂಡರುಗಳು ಇಂದು ಮಧ್ಯಾಹ್ನದ ವೇಳೆಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೈಕಮಾಂಡ್ ಸೂಚನೆಯ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಇಂದು ಸಂಜೆ 7 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ ಎಂದು ತಿಳಿಸಿದ್ದಾರೆ. ಸಭೆಗೆ ವಿಧಾನಸಭೆ ಚುನಾವಣೆಯಲ್ಲಿ ಆಯ್ಕೆಯಾದ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗು ಸಂಸದರುಗಳು ಆಗಮಿಸಬೇಕೆಂದು ಡಿಕೆಶಿ ಸೂಚಿಸಿದ್ದಾರೆ.
ಸಾಕಷ್ಟು ಪರ - ವಿರೋಧ ಚರ್ಚೆಗಳು, ಬರಲಿರುವ ಲೋಕಸಭಾ ಚುನಾವಣೆ ಸೇರಿದಂತೆ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಈ ನೇಮಕಾತಿಗೆ ಹೈಕಮಾಂಡ್ ಒಪ್ಪಿದೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಪಕ್ಷದ ಹೈಕಮಾಂಡ್ ಕೊನೆಗೂ ಮನವೊಲಿಸಿ ಮುಖ್ಯಮಂತ್ರಿ ನೇಮಕದ ಬೇಡಿಕೆಯೊಂದನ್ನು ಹೊರತುಪಡಿಸಿ ಉಳಿದ ಎಲ್ಲ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದೆ ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಹುದ್ದೆಗಾಗಿ ಪಟ್ಟು ಹಿಡಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಡುವೆ ಅಧಿಕಾರ ಹಂಚಿಕೆಯ ಸೂತ್ರವನ್ನು ಹೈಕಮಾಂಡ್ ಸಿದ್ದಪಡಿಸಿ ಇಬ್ಬರು ಮುಖಂಡರ ಪರಸ್ಪರ ಒಪ್ಪಿಗೆಯನ್ನು ಪಡೆದು ಅಧಿಕಾರ ಹಂಚಿಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.