ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣೆಗೆ ಒಂದು ವರ್ಷ ಮುನ್ನವೇ ಸಿದ್ಧತೆ ಆರಂಭಿಸಿದೆ. ಇದಕ್ಕಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಇಲ್ಲಿಯೇ ಇದ್ದು ಸಿದ್ಧತೆ ಕೈಗೊಳ್ಳಲು ನಿರ್ಧರಿಸಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ದುರ್ಬಲವಾಗುವ ಜೊತೆಗೆ ಕೇವಲ ಎರಡು ರಾಜ್ಯಗಳಲ್ಲಿ ಮಾತ್ರ ಅಧಿಕಾರ ಹೊಂದಿದ್ದು, ಮುಂಬರುವ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅಧಿಕಾರ ಹಿಡಿಯುವ ಅವಕಾಶ ಇದೆ.
ಬೆಲೆ ಏರಿಕೆ ಹಾಗೂ ಭ್ರಷ್ಟಾಚಾರದ ಕಾರಣ ಮುಂದಿಟ್ಟು ಹಾಲಿ ಬಿಜೆಪಿ ಸರ್ಕಾರ ಬದಲಿಸುವ ಮನಸ್ಸನ್ನು ರಾಜ್ಯದ ಜನತೆ ಮಾಡುವ ಸಾಧ್ಯತೆಗಳು ಕಂಡು ಬರುತ್ತಿರುವ ಹಿನ್ನೆಲೆ ಮತ್ತೊಮ್ಮೆ ತಾವು ಅಧಿಕಾರಕ್ಕೆ ಬರುವ ಅವಕಾಶದ ನಿರೀಕ್ಷೆಯಲ್ಲಿ ಕಾಂಗ್ರೆಸ್ ಇದೆ. ಬಿಜೆಪಿ-ಜೆಡಿಎಸ್ ಜೊತೆ ಕೈಜೋಡಿಸಲಿದೆಯೇ ಎಂಬ ಮಾತು ಸಹ ಕೇಳಿ ಬರುತ್ತಿದ್ದು, ಇದೇನೇ ಇರಲಿ, ತಾವು ಮತ್ತೊಮ್ಮೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಪ್ರಯತ್ನ ಬಲಪಡಿಸಲು ಕಾಂಗ್ರೆಸ್ ಮುಂದಾಗಿದೆ.
ಕಳೆದ ತಿಂಗಳು ರಾಜ್ಯಕ್ಕೆ ಭೇಟಿ ನೀಡಿದ್ದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 150 ಸ್ಥಾನವನ್ನು ಗಳಿಸಲೇಬೇಕು ಎಂಬ ಗುರಿ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರು ಈ ನಿಟ್ಟಿನಲ್ಲಿ ಸಂಪೂರ್ಣ ಪರಿಶ್ರಮ ತೊಡಗಿಸಲು ಸೂಚನೆ ಕೊಟ್ಟಿದ್ದಾರೆ. ಪಕ್ಷ ಬಲವರ್ಧನೆಗೆ ಅಗತ್ಯವಿರುವ ಎಲ್ಲಾ ಅವಕಾಶಗಳಿಗೆ ಹಸಿರುನಿಶಾನೆ ತೋರಿಸಿದ್ದು, ಕೆಪಿಸಿಸಿ ಪದಾಧಿಕಾರಿಗಳ ನೇಮಕ ಪಟ್ಟಿಗೂ ಸಮ್ಮತಿ ನೀಡಿದ್ದು ನೇಮಕವೂ ಆಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ವಿಶೇಷ ಜವಾಬ್ದಾರಿಯನ್ನು ನೀಡಲಾಗಿದೆ. ಇವರ ಕಾರ್ಯನಿರ್ವಹಣೆ ಮೇಲೆ ರಾಷ್ಟ್ರ ನಾಯಕರ ಮೇಲೆ ನಿಗಾ ಇರಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಪ್ರಯತ್ನದಲ್ಲಿ ಯಾವ್ಯಾವ ನಾಯಕರು ಶ್ರಮಿಸುವರೋ, ಅವರಿಗೆ ಮುಂಬರುವ ದಿನಗಳಲ್ಲಿ ಅಧಿಕಾರ ನೀಡುವ ನಿರ್ಧಾರವನ್ನು ರಾಷ್ಟ್ರೀಯ ನಾಯಕರು ಕೈಗೊಂಡಿದ್ದಾರೆ.