ಬೆಂಗಳೂರು: 2013ರ ವಿಧಾನಸಭೆ ಚುನಾವಣೆಗೆ ಮುನ್ನ ನಡೆಸಿದ ಪಾದಯಾತ್ರೆ ಮಾದರಿಯಲ್ಲಿ ಮತ್ತೊಮ್ಮೆ ಸಿದ್ದರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆಗೆ ಕಾಂಗ್ರೆಸ್ ಸಜ್ಜಾಗಿದೆ.
2010ರಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಿ ಬೃಹತ್ ಹೋರಾಟಕ್ಕೆ ನಾಂದಿ ಹಾಡಿದ್ದರು. ಇದರ ಯಶಸ್ಸಿನಿಂದಾಗಿಯೇ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯರ ನೇತೃತ್ವದಲ್ಲಿಯೇ ಐದು ವರ್ಷ ಪೂರ್ಣಾವಧಿ ಸರ್ಕಾರ ಕೂಡ ನಡೆಸಿತ್ತು.
ಸದ್ಯ ವಿಧಾನಸಭೆ ಪ್ರತಿಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರಗಳು ನೆರೆಪರಿಹಾರ ನೀಡಿಕೆಯಲ್ಲಿ ವಿಳಂಬ ಧೋರಣೆ ತೋರುತ್ತಿವೆ ಎಂದು ಆಗ್ರಹಿಸಿ ನೆರೆಯಿಂದ ಸಮಸ್ಯೆಗೆ ಈಡಾಗಿರುವ ಬಾಗಲಕೋಟೆಯಿಂದ ಬೆಳಗಾವಿವರೆಗೆ ಬೃಹತ್ ಪಾದಯಾತ್ರೆ ನಡೆಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಪಾದಯಾತ್ರೆಯ ನೇತೃತ್ವವನ್ನು ಮತ್ತೆ ಸಿದ್ದರಾಮಯ್ಯ ಅವರೇ ವಹಿಸಲಿದ್ದಾರೆ. ರಾಜ್ಯದ ಎಲ್ಲಾ ಕಾಂಗ್ರೆಸ್ ನಾಯಕರು ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.