ಬೆಂಗಳೂರು: ರಾಜ್ಯದಲ್ಲಿ ಉಚಿತ ವ್ಯಾಕ್ಸಿನ್ ವಿತರಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಕಾಂಗ್ರೆಸ್ ನಾಯಕರ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ನಾಯಕರಿಂದ ದಿಢೀರ್ ಪ್ರತಿಭಟನೆ; ಉಚಿತ ವ್ಯಾಕ್ಸಿನ್ ನೀಡುವಂತೆ ಸರ್ಕಾರಕ್ಕೆ ಆಗ್ರಹ - ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ
ಕರ್ನಾಟಕದಲ್ಲಿ ಸರ್ಕಾರಗಳು ಉಚಿತ ವ್ಯಾಕ್ಸಿನ್ ನೀಡಬೇಕೆಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.
ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಂಡು ಕಾಂಗ್ರೆಸ್ ನಾಯಕರು, ವಿಧಾನಸೌಧ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗ ಆಗಮಿಸಿ ಪ್ರತಿಭಟನೆ ನಡೆಸಿದರು. ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಡಾ.ಜಿ ಪರಮೇಶ್ವರ್, ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ಬೈರತಿ ಸುರೇಶ್, ಸೌಮ್ಯ ರೆಡ್ಡಿ, ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್, ರಮೇಶ್ ಕುಮಾರ್, ಕೆ.ಜೆ ಜಾರ್ಜ್,ಬಿ.ಕೆ ಹರಿಪ್ರಸಾದ್, ಸಲೀಂ ಅಹಮದ್, ಶಿಡ್ಲಘಟ್ಟ ಮುನಿಯಪ್ಪ, ನಜೀರ್ ಅಹಮದ್ ಮತ್ತಿತರ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಡಿಕೆ ಶಿವಕುಮಾರ್ ಸೇರಿದಂತೆ ಎಲ್ಲ ಕಾಂಗ್ರೆಸ್ ನಾಯಕರು ಭಿತ್ತಿಪತ್ರ ಪ್ರದರ್ಶಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.