ಬೆಂಗಳೂರು: "ದೇಶದ ಸಂಸತ್ತಿನ ಮೇಲೆ ದಾಳಿ ನಡೆದ ಕುರಿತು ಪ್ರಧಾನಮಂತ್ರಿ ಹಾಗೂ ಗೃಹ ಸಚಿವರಿಂದ ಉತ್ತರ ಕೇಳಿದ ಕಾರಣಕ್ಕೆ ವಿರೋಧ ಪಕ್ಷಗಳ 146 ಸಂಸದರನ್ನು ಸದನದಿಂದ ಅಮಾನತು ಮಾಡಿರುವುದನ್ನು ಖಂಡಿಸುತ್ತೇವೆ" ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸಂಸದರ ಅಮಾನತು ಖಂಡಿಸಿ ಫ್ರೀಡಂ ಪಾರ್ಕ್ನಲ್ಲಿ ಇಂದು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, "ಪ್ರಜಾಪ್ರಭುತ್ವ, ಅದರ ಮೌಲ್ಯಗಳನ್ನು ಉಳಿಸುವ ಉದ್ದೇಶದಿಂದ ಸರ್ಕಾರದ ವೈಫಲ್ಯ ಹಾಗೂ ಭದ್ರತಾ ಲೋಪದ ಬಗ್ಗೆ ಸದನದಲ್ಲಿ ಚರ್ಚೆಗೆ ಆಗ್ರಹಿಸಲಾಯಿತು. ಆದರೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರತುಪಡಿಸಿ ಉಳಿದ ಎಲ್ಲರನ್ನೂ ಸದನದಿಂದ ಅಮಾನತು ಮಾಡಲಾಯಿತು. ವಿರೋಧ ಪಕ್ಷದ ಸಂಸದರ ವಿರುದ್ಧದ ದಾಳಿ, ಕೇಂದ್ರ ಸರ್ಕಾರದ ದುರಾಡಳಿತ, ಸಂವಿಧಾನ ವಿರೋಧಿ ನೀತಿಯನ್ನು ಖಂಡಿಸಿ ಸಂಸತ್ ಆವರಣದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ನಮ್ಮ ಸಂಸದರು ಪ್ರತಿಭಟನೆ ಮಾಡಿದ್ದಾರೆ. ದೇಶದಾದ್ಯಂತ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸುತ್ತಿದೆ" ಎಂದು ತಿಳಿಸಿದರು.
"ಪಂಚರಾಜ್ಯ ಚುನಾವಣೆಯಲ್ಲಿ ನಾಲ್ಕು ರಾಜ್ಯ ಗೆದ್ದಿದ್ದೇವೆ. ನಾವು ಏನು ಬೇಕಾದರೂ ಮಾಡಬಹುದು ಎಂದು ಬಿಜೆಪಿ ನಾಯಕರು ಬೀಗುತ್ತಿದ್ದಾರೆ. ಜನ ಯಾವಾಗ ಬೇಕಾದರೂ ತಮ್ಮ ನಿರ್ಧಾರವನ್ನು ಬದಲಿಸಬಹುದು. ರಾಜ್ಯ ವಿಧಾನಸಭೆ ನಂತರ ಲೋಕಸಭೆ ಚುನಾವಣೆಯಲ್ಲಿ ಜನ ಬೇರೆ ರೀತಿಯ ಫಲಿತಾಂಶ ಕೊಟ್ಟಿರುವ ಉದಾಹರಣೆಗಳಿವೆ. ರಾಮಕೃಷ್ಣ ಹೆಗಡೆ ಅವರ ಕಾಲದಲ್ಲಿ ವಿಧಾನಸಭೆ ಚುನಾವಣೆ ನಂತರ ಎರಡೇ ತಿಂಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಜನರ ತೀರ್ಪು ಬದಲಾಗಿತ್ತು. ಹೀಗಾಗಿ ನಾವು ಹತಾಶರಾಗುವುದು ಬೇಡ. ನಾವು ನೀತಿ ಮೇಲೆ ರಾಜಕಾರಣ ಮಾಡುತ್ತಿದ್ದು, ಬಿಜೆಪಿಯ ಸರ್ವಾಧಿಕಾರ ಸರ್ಕಾರಕ್ಕೆ ಜನರೇ ತಕ್ಕ ಉತ್ತರ ನೀಡಲಿದ್ದಾರೆ" ಎಂದು ಹೇಳಿದರು.
"ಈ ಹೋರಾಟವನ್ನು ಜನರ ಮಧ್ಯೆ ತೆಗೆದುಕೊಂಡು ಹೋಗಬೇಕು. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು, ಸಂವಿಧಾನದ ಹಕ್ಕುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ನಮ್ಮ ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ತಲುಪಿದೆಯೇ ಎಂಬ ಪ್ರಶ್ನೆಯನ್ನು ವಿರೋಧ ಪಕ್ಷಗಳ ನಾಯಕರು ಎತ್ತುತ್ತಿದ್ದಾರೆ. ಶೇ.98ರಷ್ಟು ಫಲಾನುಭವಿಗಳಿಗೆ ನಮ್ಮ ಯೋಜನೆಗಳು ತಲುಪಿವೆ. ಸುಮಾರು 59 ಸಾವಿರ ಕೋಟಿಯಷ್ಟು ಹಣವನ್ನು ನಾವು ಈ ಗ್ಯಾರಂಟಿ ಯೋಜನೆಗಳಿಗೆ ಮೀಸಲಿಟ್ಟಿದ್ದೇವೆ. ಕೊಟ್ಟ ಮಾತು ಉಳಿಸಿಕೊಳ್ಳುವುದು ಕಾಂಗ್ರೆಸ್ ಪಕ್ಷದ ಬದ್ಧತೆ" ಎಂದರು.
"ಕೇಂದ್ರದ ಬಿಜೆಪಿ ಸರ್ಕಾರ ದೇಶದ ಚರಿತ್ರೆಯಲ್ಲಿ ದಾಖಲಾಗುವಂತಹ ಕೆಲಸವನ್ನು ಸಂಸತ್ತಿನ ಉಭಯ ಸದನಗಳಲ್ಲಿ ಸ್ಪೀಕರ್ ಅವರಿಂದ ಮಾಡಿಸಿದೆ. ಈ ದೇಶದ ಐಕ್ಯತೆ, ಸಮಗ್ರತೆ, ಶಾಂತಿಗೆ ಭಂಗವಾಗುತ್ತಿದ್ದು, ಸಂಸತ್ ಭದ್ರತಾ ಲೋಪದ ಬಗ್ಗೆ ಸರ್ಕಾರ ಅಧಿಕೃತ ಹೇಳಿಕೆಯನ್ನು ಸದನದಲ್ಲಿ ನೀಡಬೇಕು ಎಂದು ಆಗ್ರಹಿಸಿದೆವು. ಈ ಬಗ್ಗೆ ಹೇಳಿಕೆ ನೀಡಲು ಅವರಿಂದ ಸಾಧ್ಯವಾಗದೇ ವಿರೋಧ ಪಕ್ಷಗಳ ಸಂಸತ್ ಸದಸ್ಯರನ್ನು ಅಮಾನತು ಮಾಡಿ ತಮಗೆ ಬೇಕಾದ ಮಸೂದೆ ಮಂಡನೆ ಮಾಡಿ ಅನುಮೋದನೆ ಪಡೆದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಅಪಮಾನ. ಈ ವಿಚಾರವಾಗಿ ಜನರ ಗಮನ ಸೆಳೆಯಲು ದೇಶದಾದ್ಯಂತ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ" ಎಂದು ಹೇಳಿದರು.