ಬೆಂಗಳೂರು:ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಆದರೆ ಪ್ರತಿಭಟನೆ ವೇಳೆ ಅಲ್ಲಲ್ಲಿ ಕೊರೊನಾ ನಿಯಮಗಳು ಉಲ್ಲಂಘನೆಯಾಗಿವೆ ಎನ್ನಲಾಗಿದೆ.
ರಾಯಚೂರಿನ ಸ್ಟೇಷನ್ ರಸ್ತೆಯಲ್ಲಿರುವ ಇಂಡಿಯನ್ ಪೆಟ್ರೋಲ್ ಬಂಕ್ ಮುಂದೆ ಪ್ರತಿಭಟನೆ ನಡೆಸಿ ಕೊರೊನಾ ಸಂಕಷ್ಟದ ದಿನಗಳಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡುತ್ತಿದೆ. ಇದರಿಂದ ಜನಸಾಮಾನ್ಯರ ಮೇಲೆ ಪ್ರಭಾವ ಬೀರಿ ಸಂಕಷ್ಟ ಎದುರಿಸುವಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಇತ್ತ ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತಗಳ ಬೆಲೆ ಏರಿಕೆ ಖಂಡಿಸಿ ಗದಗ ನಗರದಲ್ಲಿ ಶಾಸಕ ಹೆಚ್.ಕೆ.ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಮುಳಗುಂದ ನಾಕಾ, ಹಳೇ ಡಿಸಿ ಆಫೀಸ್ ಸರ್ಕಲ್ ಬಳಿರುವ ಪೆಟ್ರೋಲ್ ಬಂಕ್ನಲ್ಲಿ ಪ್ರತಿಭಟನೆ ನಡೆಸಲಾಯಿತು.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ತೈಲ ಬೆಲೆ ಏರಿಕೆ ಹಾಗೂ ದಿನ ಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ವಿವಿಧ ಪೆಟ್ರೋಲ್ ಬಂಕ್‌ಗೆ ತೆರಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಚಿತ್ರದುರ್ಗದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು. ಪೆಟ್ರೋಲ್, ಡೀಸೆಲ್ ಅಲ್ಲದೆ ದಿನ ನಿತ್ಯದ ಅಗತ್ಯ ವಸ್ತುಗಳ ಬೆಲೆ ಕೂಡ ಏರಿಕೆ ಆಗುತ್ತಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಮಯದಲ್ಲಿ ಬೆಲೆ ಏರಿಕೆ ಮಾಡುವುದು ಎಷ್ಟು ಸರಿ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರು ಆಕ್ರೋಶ ಹೊರಹಾಕಿದರು.
ಬಾಗಲಕೋಟೆಯ ಸಾಸನೂರು ಪೆಟ್ರೋಲ್ ಬಂಕ್ ಬಳಿ ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಎಚ್.ವೈ.ಮೇಟಿ, ಜೆ.ಟಿ.ಪಾಟೀಲ್, ನಂಜಯ್ಯನಮಠ್ ಭಾಗಿಯಾಗಿ ಸರ್ಕಾರದ ವಿರುದ್ಧ ಕಿಡಿಕಾರಿದರು.
ಬಳ್ಳಾರಿಯಲ್ಲಿಯೂ ಸಹ ಕಾಂಗ್ರೆಸ್ ಮುಖಂಡರು ಗುಂಪು ಕಟ್ಟಿಕೊಂಡೇ ಪ್ರತಿಭಟನೆಗೆ ಮುಂದಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆತು ಹೋದ್ರು. ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಹಾಗೂ ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್, ಮಹಾನಗರ ಪಾಲಿಕೆ ಸದಸ್ಯ ಪಿ.ಗಾದೆಪ್ಪ ಸೇರಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತ ಕೊಪ್ಪಳದಲ್ಲಿ ಶಾಸಕರಾದ ಅಮರೇಗೌಡ ಪಾಟೀಲ್ ಭಯ್ಯಾಪುರ, ಕೆ.ರಾಘವೇಂದ್ರ ಹಿಟ್ನಾಳ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಶಿವರಾಜ ತಂಗಡಗಿ ನಗರದ ಕಿಶೋರಿ ಪೆಟ್ರೋಲ್ ಬಂಕ್ನಲ್ಲಿ ಪೆಟ್ರೋಲ್ ಹಾಕಿಸಿಕೊಳ್ಳಲು ಬಂದ ಗ್ರಾಹಕರಿಗೆ ನೂರು ರುಪಾಯಿ ನೀಡಿದರು. ಅಲ್ಲದೆ ಸ್ವೀಟ್ ಹಂಚಿ, ಗುಲಾಬಿ ನೀಡಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದರು.
ಕುಷ್ಟಗಿಯಲ್ಲಿ ಕಾಂಗ್ರೆಸ್ ಎಸ್ಸಿ ಘಟಕದ ಮಂಜುನಾಥ ಕಟ್ಟಿಮನಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಪೆಟ್ರೋಲ್ ಬಂಕ್ನಲ್ಲಿ ಇದೇನಾ ಅಚ್ಚೇ ದಿನ್ ಎಂದು ಪ್ರಶ್ನಿಸಿದರು. ಜನಸಾಮಾನ್ಯರಿಗೆ ಬೆಲೆ ಏರಿಕೆ ಹೊರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಲಬುರಗಿಯಲ್ಲಿ ಮಾಜಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಪೆಟ್ರೋಲ್ ಬೆಲೆ ಸೆಂಚೂರಿ ನಾಟೌಟ್, ಮೋದಿಗೆ ಗೇಟೌಟ್ ಹೇಳಿ ಎಂಬ ಪೋಸ್ಟರ್ ಹಿಡಿದು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ತೈಲ ಬೆಲೆ, ಗ್ಯಾಸ್ ಬೆಲೆ ಮತ್ತು ವಿದ್ಯುತ್ ದರ ಕಡಿಮೆಗೊಳಿಸಲು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಒತ್ತಾಯಿಸಿದರು.
ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ದರವು ನೂರರ ಗಡಿ ದಾಟಿರೋದನ್ನ ಖಂಡಿಸಿ ಬಳ್ಳಾರಿಯಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ (ನಗರ) ಅಧ್ಯಕ್ಷ ಜಿ.ಎಸ್.ಮಹಮ್ಮದ್ ರಫೀಕ್ ನೇತೃತ್ವದಲ್ಲಿ ನೂರಾರು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಗಡಿಗಿ ಚನ್ನಪ್ಪ ವೃತ್ತದ ಬಳಿಯಿರುವ ಪೆಟ್ರೋಲ್ ಬಂಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಅಕ್ರೋಶ ವ್ಯಕ್ತಪಡಿಸಿದರು.
ಓದಿ:ಬಾಲಕಿಯ ವಿವಸ್ತ್ರಗೊಳಿಸಿ, ವಿಡಿಯೋ ಮಾಡಿ ವೈರಲ್ ಮಾಡಿದ ಪುಂಡರು: ಉತ್ತರ ಪ್ರದೇಶದಲ್ಲಿ ಅಮಾನವೀಯ ಘಟನೆ