ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್, ಶಿಗ್ಗಾಂವಿ ಸೇರಿ 7 ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಈ ಮೂಲಕ ಈವರೆಗೆ 216 ಕ್ಷೇತ್ರಗಳಿಗೆ ಹುರಿಯಾಳುಗಳನ್ನು ಪ್ರಕಟಿಸಿದ್ದು, ಇನ್ನೂ 8 ಕ್ಷೇತ್ರಗಳನ್ನು ಕಾಂಗ್ರೆಸ್ ಬಾಕಿ ಉಳಿಸಿಕೊಂಡಿದೆ.
ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮುನಿಸಿಕೊಂಡು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾಂವಿ ಕ್ಷೇತ್ರಕ್ಕೆ ಮೊಹಮ್ಮದ್ ಯೂಸೂಫ್ ಸವಣೂರು ಅವರಿಗೆ ಟಿಕೆಟ್ ನೀಡಲಾಗಿದೆ. ಶಿಗ್ಗಾಂವಿಯಿಂದ ವಿನಯ್ ಕುಲಕರ್ಣಿ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿತ್ತು.
ಈ ಮೊದಲು ಅಭ್ಯರ್ಥಿಗಳ ಮೂರು ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್, 216 ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿತ್ತು. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನವಾದ್ದರಿಂದ ಇಂದು ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿ, ಇನ್ನೂ 8 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ.
ಎಸ್.ರಾಮಪ್ಪಗೆ ತಪ್ಪಿದ ಟಿಕೆಟ್, ನಂದಿಗಾವಿ ಶ್ರೀನಿವಾಸ್ಗೆ ಮಣೆ:ಸಾಕಷ್ಟು ಹಗ್ಗಜಗ್ಗಾಟದ ಬಳಿಕ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಹರಿಹರಕ್ಕೆ ಟಿಕೆಟ್ ಘೋಷಣೆ ಮಾಡಿದ್ದು, ಹಾಲಿ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪನವರಿಗೆ ಶಾಕ್ ನೀಡಿದೆ. ನಾಲ್ಕನೇ ಪಟ್ಟಿಯಲ್ಲಿ ನಂದಿಗಾವಿ ಶ್ರೀನಿವಾಸ್ಗೆ ಹೈಕಮಾಂಡ್ ಮಣೆ ಹಾಕಿದೆ. ಟಿಕೆಟ್ ಸಿಗುವ ಭರವಸೆಯಲ್ಲಿ ಕ್ಷೇತ್ರದಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡು ಸಂಚರಿಸುತ್ತಿದ್ದ ರಾಮಪ್ಪನವರಿಗೆ ಟಿಕೆಟ್ ನೀಡಿದೆ ಇರುವುದು ಅವರ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ವಿದೇಶದಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ನಂದಿಗಾವಿ ಶ್ರೀನಿವಾಸ್ ಇತ್ತೀಚೆಗೆ ಅಷ್ಟೇ ಕೆಲಸ ಬಿಟ್ಟು ಹರಿಹರಕ್ಕೆ ಆಗಮಿಸಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದರು.