ಬೆಂಗಳೂರು: "ಹಿಂದೂಗಳನ್ನು ನಿಂದಿಸಿದ ಕಾಂಗ್ರೆಸ್ ಪಕ್ಷವನ್ನು ರಾಜ್ಯದ ಜನತೆ ಯಾವತ್ತೂ ಕ್ಷಮಿಸುವುದಿಲ್ಲ. ಅವರಿಗೆ ಜನರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸರಿಯಾದ ಉತ್ತರ ಕೊಡಲಿದ್ದಾರೆ" ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಪ್ರತಿಕ್ರಿಯಿಸಿದರು.
ಕುಮಾರಕೃಪಾ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್ ಪಕ್ಷವು ಪ್ರತಿ ಬಾರಿ ನಮ್ಮ ಪ್ರಾಚೀನ, ಶ್ರೇಷ್ಠ ಸಂಸ್ಕೃತಿ ಮತ್ತು ಧರ್ಮವನ್ನು ಹೀಯಾಳಿಸುವ ಕೆಲಸ ಮಾಡುತ್ತಲೇ ಇದೆ. ಈ ರೀತಿಯ ನಿಂದನೆ ಅಕ್ಷಮ್ಯ. ಸತೀಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಪಕ್ಷ ಕ್ರಮ ತೆಗೆದುಕೊಳ್ಳಬೇಕು. ಇಲ್ಲವೇ ಅವರಿಂದ ರಾಜೀನಾಮೆ ಪಡೆಯಬೇಕು. ಇಲ್ಲವಾದರೆ ರಾಹುಲ್ ಗಾಂಧಿ, ಸ್ಥಳೀಯರೇ ಆದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರು ಹಿಂದೂಗಳ ಅವಹೇಳನವನ್ನು ಸಮರ್ಥಿಸಿದಂತೆ ಆಗುತ್ತದೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.