ಬೆಂಗಳೂರು :ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಘೋಷಿಸಿದ ಯೋಜನೆಯನ್ನು ಜಾರಿಗೆ ತರುವ ಕಾರ್ಯವನ್ನು ಮಾಡುತ್ತದೆ ಎಂದು ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ತಿಳಿಸಿದ್ದಾರೆ. ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿ, ಕರ್ನಾಟಕ ರಾಜ್ಯ ಚುನಾವಣೆ ಹೊಸ್ತಿಲಲ್ಲಿದ್ದು, ಪಕ್ಷದ ಎಲ್ಲಾ ನಾಯಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪ್ರಚಾರದಲ್ಲಿ ನಿರತರಾಗಿದ್ದಾರೆ. ಕಾಂಗ್ರೆಸ್ ಪಕ್ಷ ಈ ಬಾರಿ ತನ್ನ ಪ್ರಣಾಳಿಕೆಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ ಹಾಗೂ ಉಚಿತ ಪಯಣ ಯೋಜನೆ ಘೋಷಣೆ ಮಾಡಿದ್ದು, ಕಾಂಗ್ರೆಸ್ ಸರ್ಕಾರ ಈ ಯೋಜನೆಗಳನ್ನು ಜಾರಿ ಮಾಡಿಯೇ ಮಾಡಲಿದೆ. ಇದೇ ಕಾರಣಕ್ಕೆ ಜನ ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿದ್ದಾರೆ ಎಂದರು.
ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆ ಸಮಯದಲ್ಲಿ ನೀಡಿದ್ದ ಭರವಸೆಯನ್ನು ಅಧಿಕಾರಕ್ಕೆ ಬಂದ ನಂತರ ಜಾರಿ ಮಾಡಿದೆ. ರೈತರ ಸಾಲಮನ್ನಾ ಸೇರಿದಂತೆ ಅನೇಕ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಜಾರಿ ಮಾಡಿದ್ದೇವೆ. ಕರ್ನಾಟಕದಲ್ಲಿ ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ತಿಂಗಳು 200 ಯೂನಿಟ್ ಉಚಿತ ನೀಡಲಾಗುವುದು. ಈ ಯೋಜನೆಗಳನ್ನು ಬೇರೆ ರಾಜ್ಯಗಳಲ್ಲಿ ಜಾರಿ ಮಾಡಲಾಗಿದ್ದು, ಈಗ ಇಲ್ಲಿಯೂ ಘೋಷಣೆ ಮಾಡಿದ್ದೇವೆ ಎಂದು ಹೇಳಿದರು.
ಬಡ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ: ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ಪ್ರೋತ್ಸಾಹ ಧನ ನೀಡಲಾಗುವುದು. ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ಸದಸ್ಯರಿಗೆ ಪ್ರತಿ ತಿಂಗಳು 10 ಕೆ.ಜಿ ಅಕ್ಕಿ ಉಚಿತವಾಗಿ ನೀಡಲಾಗುವುದು. ಛತ್ತೀಸ್ಗಢದಲ್ಲೂ ಇದೇ ರೀತಿಯ ಯೋಜನೆ ಜಾರಿ ಮಾಡಿದ್ದೇವೆ. ನಮ್ಮಲ್ಲಿ ಪ್ರತಿ ಕುಟುಂಬಕ್ಕೆ ಆಧಾರದ ಮೇಲೆ ನೀಡಿದ್ದು, ಇಲ್ಲಿ ಪ್ರತಿವ್ಯಕ್ತಿ ಆಧಾರದ ಮೇಲೆ ನೀಡಲಾಗುತ್ತಿದೆ. ಇನ್ನು ಯುವನಿಧಿ ಕಾರ್ಯಕ್ರಮದ ಮೂಲಕ ನಿರುದ್ಯೋಗ ಪದವೀಧರರಿಗೆ ಪ್ರತಿ ತಿಂಗಳು 2 ವರ್ಷದವರೆಗೆ 3 ಸಾವಿರ, ಡಿಪ್ಲೋಮಾ ಪದವೀಧರರಿಗೆ 1500 ರೂ ನಿರುದ್ಯೋಗ ಭತ್ಯೆ ನೀಡಲಾಗುವುದು. ನಮ್ಮ ರಾಜ್ಯದಲ್ಲಿ 12ನೇ ತರಗತಿ ಉತ್ತೀರ್ಣರಾದವರಿಗೆ ಪ್ರತಿ ತಿಂಗಳು 1500 ರೂ. ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ಇನ್ನು ರಾಜ್ಯದ ಮಹಿಳೆಯರಿಗೆ ಸಾರ್ವಜನಿಕ ಬಸ್ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಲಾಗುವುದು ಎಂದರು.