ಕಾಂಗ್ರೆಸ್ ನಿಯೋಗದಿಂದ ಮುಖ್ಯ ಕಾರ್ಯದರ್ಶಿ ಭೇಟಿ; ಹೊರ ರಾಜ್ಯ ಕನ್ನಡಿಗರನ್ನು ಕರೆತರಲು ಮನವಿ
ಹೊರ ರಾಜ್ಯದಲ್ಲಿರುವ ಕನ್ನಡಿಗರನ್ನು ರಾಜ್ಯಕ್ಕೆ ಕರೆತರಬೇಕು. ಅವರಿಗೆ ಉಚಿತ ರೈಲು ಪ್ರಯಾಣಕ್ಕೆ ವ್ಯವಸ್ಥೆ ಮಾಡುವಂತೆ ಕೋರಿದರು. ಅಂತರ್ ಜಿಲ್ಲೆಗಳಲ್ಲಿ ಸಿಲುಕಿರುವ ಕಾರ್ಮಿಕರನ್ನು ಅವರ ಸ್ವಂತ ಊರಿಗೆ ಹೋಗಲು ವ್ಯವಸ್ಥೆ ಮಾಡಬೇಕು ಎಂದು ಕಾಂಗ್ರೆಸ್ ನಿಯೋಗ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರಿಗೆ ಮನವಿ ಮಾಡಿದರು.
ಬೆಂಗಳೂರು: ಹೊರ ರಾಜ್ಯದಲ್ಲಿರುವ ಕನ್ನಡಿಗರು ಹಾಗೂ ಕಾರ್ಮಿಕರನ್ನು ರೈಲಿನಲ್ಲಿ ಕರೆ ತರುವಂತೆ ಕೋರಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಮುಖ್ಯ ಕಾರ್ಯದರ್ಶಿ ಟಿ. ವಿಜಯ ಭಾಸ್ಕರ್ಗೆ ಮನವಿ ಪತ್ರ ಸಲ್ಲಿಸಿತು.
ಈ ವೇಳೆ ಹೊರ ರಾಜ್ಯದಲ್ಲಿರುವ ಕನ್ನಡಿಗರನ್ನು ರಾಜ್ಯಕ್ಕೆ ಕರೆತರುವಂತೆ ಮನವಿ ಮಾಡಿದರು. ಅವರಿಗೆ ಉಚಿತ ರೈಲು ಪ್ರಯಾಣಕ್ಕೆ ವ್ಯವಸ್ಥೆ ಮಾಡುವಂತೆ ಕೋರಿದರು. ಅಂತರ್ ಜಿಲ್ಲೆಗಳಲ್ಲಿ ಸಿಲುಕಿರುವ ಕಾರ್ಮಿಕರನ್ನು ಅವರ ಸ್ವಂತ ಊರಿಗೆ ಹೋಗಲು ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದರು.
ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಮಿಕರ ಊರುಗಳಿಗೆ ತೆರಳಲು ಉಚಿತ ಬಸ್ ವ್ಯವಸ್ಥೆ ಮಾಡಿದ ಸಿಎಂ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಸಿಎಂ ಅವರ ಸಮಯೋಚಿತ ನಿರ್ಧಾರವನ್ನು ಅಭಿನಂದಿಸುತ್ತೇವೆ. ಅದೇ ರೀತಿ ಬೇರೆ ರಾಜ್ಯದಲ್ಲಿರುವ ನಮ್ಮ ಕನ್ನಡಿಗರನ್ನು ರಾಜ್ಯಕ್ಕೆ ಕರೆಸುವ ಕೆಲಸ ಆಗಬೇಕು. ನಮ್ಮ ರಾಜ್ಯದವರು ಹಾಗೂ ಅನ್ಯ ರಾಜ್ಯದವರನ್ನು ಅವರ ಊರುಗಳಿಗೆ ಕಳುಹಿಸಿಕೊಡಲು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿದ್ದೇವೆ ಎಂದು ತಿಳಿಸಿದರು.
ನಮ್ಮ ಪಕ್ಷದ ಮನವಿಗೆ ಗೌರವಿಸಿ ಸಿಎಂ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದಾರೆ. ಅವರ ಬಗ್ಗೆ ನಮಗೆ ಅಪಾರ ಗೌರವವಿದೆ. ಅವರ ಮಂತ್ರಿಗಳು ಏನೇನೋ ಹೇಳಿಕೆ ಕೊಡುತ್ತಿದ್ದಾರೆ ಎಂದು ಕಿಡಿ ಕಾರಿದರು.
ಸಚಿವ ಸುರೇಶ್ ಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ವಿರೋಧ ಪಕ್ಷವಾಗಿ ನಮ್ಮ ಕೆಲಸ ಮಾಡುತ್ತಿದ್ದೇವೆ. ಪ್ರತಿಭಟನೆ ಮಾಡುವಷ್ಟು ನಮಗೆ ಸ್ವಾತಂತ್ರ್ಯ ಇಲ್ಲವೆ?. ವಿರೋಧ ಪಕ್ಷದವರ ಬಾಯಿ ಮುಚ್ಚಿಸುವ ಕೆಲಸ ಮಾಡಲು ಸಚಿವರಿಗೆ ನಾವು ಬಿಡಲ್ಲ ಎಂದು ತಿಳಿಸಿದರು.