ಬೆಂಗಳೂರು : ರಾಜ್ಯದಲ್ಲಿ ಕ್ರೀಡೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ 70 ಎಕರೆ ವ್ಯಾಪ್ತಿಯಲ್ಲಿ ಸ್ಪೋರ್ಟ್ಸ್ ಸಿಟಿ ನಿರ್ಮಿಸುವ ಪ್ರಸ್ತಾವನೆಯು ಸರ್ಕಾರದ ಮುಂದಿದೆ. ಮುಂಬರುವ ದಿನಗಳಲ್ಲಿ ಅದನ್ನು ಕಾರ್ಯಗತಗೊಳಿಸಲಾಗುವುದು ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು.
ರಾಜಭವನದ ಗಾಜಿನಮನೆಯಲ್ಲಿ ಕರ್ನಾಟಕ ಒಲಿಂಪಿಕ್ಸ್ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಒಲಿಂಪಿಕ್ಸ್ ಅಸೋಸಿಯೇಷನ್ ಹಾಗೂ ಏಷ್ಯನ್ ಗೇಮ್ಸ್ ವಿಜೇತ ಕ್ರೀಡಾಪಟುಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯದ ಯುವಕರು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಬೇಕು. ಈ ನಿಟ್ಟಿನಲ್ಲಿ ಯುವಕರಿಗೆ ಕ್ರೀಡೆಯನ್ನು ಉತ್ತೇಜಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಂಕಲ್ಪ ತೊಟ್ಟು ಶ್ರಮದಿಂದ ಕ್ರೀಡಾಭ್ಯಾಸ ನಡೆಸಿ, ರಾಜ್ಯ ಮತ್ತು ದೇಶಕ್ಕೆ ಕೀರ್ತಿ ತರಬೇಕು. ಅದಕ್ಕೆ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದರು.
ಆಸ್ಟ್ರೇಲಿಯಾ, ಅಮೆರಿಕ ಹಾಗೂ ಚೀನಾ ದೇಶಗಳಲ್ಲಿ ಕ್ರೀಡಾ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲಿಯೂ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಿದರೆ, ಯುವಕರಿಗೆ ಅನುಕೂಲವಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುವುದು. ಸುಸಜ್ಜಿತವಾದ ಬಾಸ್ಕೆಟ್ ಬಾಲ್ ಕ್ರೀಡಾಂಗಣ ನಿರ್ಮಾಣಕ್ಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 5 ಎಕರೆ ಭೂಮಿಯನ್ನು ಮೀಸಲಿಡಲಾಗಿದೆ. ಅಲ್ಲದೇ, ರಾಜ್ಯದಲ್ಲಿ 15ಕ್ಕೂ ಹೆಚ್ಚು ಸಿಂಥೆಟಿಕ್ ಟ್ರ್ಯಾಕ್‌ಗಳನ್ನು ನಿರ್ಮಿಸಲಾಗಿದೆ. ತುಮಕೂರಿನಲ್ಲಿ 58 ಕೋಟಿ ರೂ. ಅನುದಾನದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಲಾಗಿದ್ದು, ಕಂಠೀರವ ಸ್ಟೇಡಿಯಂಗಿಂತ ಸುಸಜ್ಜಿತವಾಗಿದೆ. ಇದೇ ಮಾದರಿಯಲ್ಲಿ ಬೇರೆ ಜಿಲ್ಲೆಗಳಲ್ಲಿಯೂ ಕ್ರೀಡಾಂಗಣ ನಿರ್ಮಿಸಲಾಗುವುದು ಎಂದು ಪರಮೇಶ್ವರ್ ಹೇಳಿದರು.