ಬೆಂಗಳೂರು: ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ ತಾಲೂಕುಗಳನ್ನು ಒಳಗೊಂಡ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಈ ಹಿಂದೆ ದೊಡ್ಡಬಳ್ಳಾಪುರ, ನೆಲಮಂಗಲ, ಯಲಹಂಕ, ದೇವನಹಳ್ಳಿ, ಆನೇಕಲ್, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಹೊಸಕೋಟೆ, ರಾಮನಗರ, ಮಾಗಡಿ, ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳು ಬೆಂಗಳೂರು ಜಿಲ್ಲೆಯ ಭಾಗವಾಗಿದ್ದವು. ತದನಂತರ ದೊಡ್ಡಬಳ್ಳಾಪುರ, ನೆಲಮಂಗಲ, ದೇವನಹಳ್ಳಿ, ಹೊಸಕೋಟೆ, ಚನ್ನಪಟ್ಟಣ, ರಾಮನಗರ, ಮಾಗಡಿ ಹಾಗೂ ಕನಕಪುರ ತಾಲೂಕುಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಡಲಾಯಿತು. ನಂತರ ದೊಡ್ಡಬಳ್ಳಾಪುರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊಸಕೋಟೆ, ನೆಲಮಂಗಲ ದೇವನಹಳ್ಳಿ, ದೊಡ್ಡಬಳ್ಳಾಪುರ ಒಳಗೊಂಡಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನಾಗಿ ಮಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಂಬ ಹೆಸರನ್ನು ಹಾಗೇ ಉಳಿಸಿಕೊಳ್ಳಲಾಯಿತು ಎಂದಿದ್ದಾರೆ.