ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿರುವ ಶ್ರೀವೆಂಕಟರಮಣಸ್ವಾಮಿ ಕಾಲೇಜಿನ 2019-20 ನೇ ಸಾಲಿನ ಸಂಯೋಜನೆ ನವೀಕರಣ ಮಾಡುವ ಸಂಬಂಧ ನೀಡಿದ್ದ ಆದೇಶ ಪಾಲಿಸದ ಹಿನ್ನೆಲೆ ಮಂಗಳೂರು ವಿಶ್ವವಿದ್ಯಾಲಯ ಕುಲಪತಿ ಹಾಗೂ ರಿಜಿಸ್ಟ್ರಾರ್ಗೆ ಹೈಕೋರ್ಟ್ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ನೋಟಿಸ್ ಜಾರಿ ಮಾಡಿದೆ.
ಕಾಲೇಜು ಆಡಳಿತ ಮಂಡಳಿ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ, ಮಂಗಳೂರು ವಿವಿಯ ಕುಲಪತಿ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಹಾಗೂ ಕುಲಸಚಿವ ಕೆ.ರಾಜು ಮೊಗವೀರ ಅವರಿಗೆ ನೋಟಿಸ್ ಜಾರಿ ಮಾಡಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ಮಂಗಳೂರು ವಿವಿ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ಪಾಲನೆ ಮಾಡಿಲ್ಲ. ಕುಲಪತಿ ಹಾಗೂ ಕುಲಸಚಿವರು ಉದ್ದೇಶಪೂರ್ವಕವಾಗಿಯೇ ಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದರು. ಅಲ್ಲದೆ, ಆರೋಪಿತರ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮ ಜರುಗಿಸಬೇಕು ಹಾಗೂ ಏಕ ಸದಸ್ಯ ಪೀಠದ ಆದೇಶವನ್ನು ತುರ್ತಾಗಿ ಪಾಲಿಸುವಂತೆ ನಿರ್ದೇಶಿಸಬೇಕು ಎಂದು ಮನವಿ ಮಾಡಿದರು.
ಪ್ರಕರಣದ ಹಿನ್ನೆಲೆ : ಮಂಗಳೂರು ವಿಶ್ವವಿದ್ಯಾಲಯದಿಂದ 1992 ರಿಂದಲೇ ಶ್ರೀ ವೆಂಕಟರಮಣ ಸ್ವಾಮಿ (ಎಸ್ವಿಎಸ್) ಕಾಲೇಜು ಕಾಯಂ ಆಗಿ ಬಿಎ, ಬಿಕಾಂ ಬಿಎಸ್ಸಿ ಕೋರ್ಸ್ಗಳಿಗೆ ಮಾನ್ಯತೆ ಪಡೆದುಕೊಂಡಿದೆ. ಕಳೆದ ಶೈಕ್ಷಣಿಕ ವರ್ಷಕ್ಕೆ ಸಂಯೋಜನೆ ನವೀಕರಣಕ್ಕೆ 2018 ರಲ್ಲಿ ಕಾಲೇಜು ಆಡಳಿತ ಮಂಡಳಿ ಅರ್ಜಿ ಸಲ್ಲಿಸಿತ್ತು. ವಿವಿ ನಿಯಮಾನುಸಾರ ಅಗತ್ಯ ದಾಖಲೆಗಳನ್ನು ಸಲ್ಲಿಸಿತ್ತು. ಆದರೆ ವಿವಿ ಕಾಲೇಜಿಗೆ ಸಂಯೋಜನೆ ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ ಕಾಲೇಜು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, 2020 ರ ಸೆಪ್ಟೆಂಬರ್ 22 ರಂದು ಎರಡು ವಾರಗಳಲ್ಲಿ ಸಂಯೋಜನೆ ನವೀಕರಿಸುವ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ವಿವಿಗೆ ಆದೇಶಿಸಿತ್ತು. ಆದರೆ ವಿವಿ ಆದೇಶ ಪಾಲಿಸದ ಹಿನ್ನೆಲೆ ಕಾಲೇಜು ಆಡಳಿತ ಮಂಡಳಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದೆ.