ಬೆಂಗಳೂರು :ರಾಜ್ಯ ಈ ಬಾರಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಹೊಸ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಡೆ ಹಿಡಿದಿರುವ ಕಾಮಗಾರಿ ಬಿಲ್ಗಳನ್ನು ಕೂಡಲೇ ಬಿಡುಗಡೆ ಮಾಡುವಂತೆ ರಾಜ್ಯ ಗುತ್ತಿಗೆದಾರರ ಸಂಘ ಸರ್ಕಾರವನ್ನು ಒತ್ತಾಯಿಸಿದೆ. ಸಂಘ ಒತ್ತಾಯಿಸಿರುವುದು ಮಾತ್ರವಲ್ಲದೇ, ಜುಲೈ 15ರೊಳಗೆ ಹಣ ಬಿಡುಗಡೆ ಮಾಡಲು ವಿಫಲವಾದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಎಚ್ಚರಿಕೆ ನೀಡಿದೆ.
ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಕಾಮಗಾರಿಗಳ ಬಿಲ್ಗಳನ್ನು ತಡೆಹಿಡಿಯಲಾಗಿತ್ತು. ಇದೇ ವಿಚಾರವಾಗಿ ರಾಜ್ಯ ಗುತ್ತಿಗೆದಾರರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬಿಲ್ ಮೊತ್ತವನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದೆ. ಕಳೆದ ಒಂದು ವಾರದ ಹಿಂದೆಷ್ಟೇ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಅವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳ ನಿಯೋಗ ಸಿದ್ದರಾಮಯ್ಯ ಅವರನ್ನು ಗೃಹಕಚೇರಿ ಕೃಷ್ಣಾದಲ್ಲಿ ಜೂ.23 ರಂದು ಭೇಟಿಯಾಗಿ ಗುತ್ತಿಗೆದಾರರ ಸಮಸ್ಯೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿತ್ತು.
ಸಂಘದ ಮನವಿಯನ್ನು ಪುರಸ್ಕರಿಸಿ ಬಿಲ್ಗಳ ಬಿಡುಗಡೆಗೆ ಜೂ.28 ರಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಆದರೆ, ಈ ಆದೇಶ ಹೊರಡಿಸಿ ಒಂದು ವಾರ ಕಳೆದರೂ ಹಣ ಬಿಡುಗಡೆ ಮಾಡುತ್ತಿಲ್ಲ. ಒಂದೂವರ ತಿಂಗಳಿಂದ ಹಣ ಬಿಡುಗಡೆ ಮಾಡದೇ ಇರುವುದರಿಂದ ಗುತ್ತಿಗೆದಾರರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರ ಕಣ್ಣೊರೆಸುವ ತಂತ್ರವನ್ನು ಕೈ ಬಿಟ್ಟು ಆದಷ್ಟೂ ಬೇಗನ ಬಾಕಿ ಮೊತ್ತವನ್ನು ಬಿಡುಗಡೆ ಮಾಡಬೇಕು ಎಂದು ಸಂಘದವರು ಒತ್ತಾಯಿಸಿದ್ದಾರೆ.