ಬೆಂಗಳೂರು: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕೈಗೊಂಡಿರುವ ಕ್ರಮಗಳ ಬಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಮಾಹಿತಿ ಪಡೆದುಕೊಂಡಿದ್ದಾರೆ.
ವಿಧಾನಸೌಧದಲ್ಲಿ ಇಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಎಸ್ಪಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒಗಳ ಜೊತೆ ವಿಡಿಯೋ ಸಂವಾದ ನಡೆಸಿ, ಕೊರೊನಾ ಬಗ್ಗೆ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳು ಹಾಗೂ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ಕೊರೊನಾ ಸೋಂಕು ಹರಡದಂತೆ ತಡೆಯಲು ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿಗಳು ಹಾಗೂ ಎಸ್ಪಿಗಳಿಗೆ ಸೂಚಿಸಿದ್ದಾರೆ.
ಕೊರೊನಾ ಸೋಂಕಿತರ ಜೊತೆಗೆ ಮೊದಲ ಮತ್ತು ಎರಡನೇ ಸಂಪರ್ಕದಲ್ಲಿರುವವರ ಮೇಲೆ ನಿಗಾ ಇಡಬೇಕು. ಜನರು ಮನೆಯಲ್ಲೇ ಇರುವಂತೆ ಎಚ್ಚರ ವಹಿಸಬೇಕು. ದಿನಸಿ ಅಂಗಡಿಗಳ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ವಲಸಿಗರನ್ನು ಕಡ್ಡಾಯವಾಗಿ ಕ್ವಾರಂಟೈನ್ ಮಾಡಬೇಕು. ಅವರಿಗೆ ಊಟ ಮತ್ತಿತರ ವ್ಯವಸ್ಥೆ ಮಾಡಬೇಕು. ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡಬೇಕು ಎಂದು ನಿರ್ದೇಶನ ನೀಡಿದ್ದಾರೆ.