ಬೆಂಗಳೂರು:ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವ್ಯಾಪಕ ದೂರು ಕೇಳಿಬಂದಿತ್ತು. ಈ ಹಿನ್ನೆಲೆ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಸೇರಿದಂತೆ 10 ಉಪ ನೋಂದಣಾಧಿಕಾರಿಗಳ ಕಚೇರಿಗಳ ಮೇಲೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದೆ.
ಇತ್ತೀಚಿನ ದಿನಗಳಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಇಸಿ ಸರ್ಟಿಫಿಕೇಟ್ ವಿಳಂಬ, ಅಕ್ರಮವಾಗಿ ಜಮೀನು ಪರಭಾರೆ, ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಕೆ, ಖಾತಾ ಮಾಡಿಕೊಡಲು ಸಾರ್ವಜನಿಕರಿಂದ ಹೆಚ್ಚು ಹಣ ವಸೂಲಿ ಸೇರಿದಂತೆ ನಾನಾ ರೀತಿಯ ದೂರುಗಳ ಸರಮಾಲೆ ಲೋಕಾಯುಕ್ತಕ್ಕೆ ಬಂದಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಲೋಕಾಯುಕ್ತ ಅಧಿಕಾರಿಗಳು, ಮಂಗಳವಾರ 10 ಕಡೆಗಳಲ್ಲಿ ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ. ಪರಿಶೀಲನೆ ಬಳಿಕ ಆಂತರಿಕ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ.