ಬೆಂಗಳೂರು: ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರ ವಿರುದ್ಧ ಮಾನನಷ್ಟ ಆರೋಪದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಆಂಜನೇಯ ರೆಡ್ಡಿ ವಿರುದ್ಧ ಮಾನ ಹಾನಿಕರ ಹೇಳಿಕೆ ನೀಡಿದ್ದ ಆರೋಪ ಸಚಿವರ ಮೇಲಿತ್ತು. ಈ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಆಂಜನೇಯ ರೆಡ್ಡಿ ದೂರು ದಾಖಲಿಸಿದ್ದರು. ಜೊತೆಗೆ ಈ ಸಂಬಂಧ ಸಾಕ್ಷ್ಯಾಧಾರಗಳನ್ನು ಒದಗಿಸಿದ್ದರು. ಇವುಗಳನ್ನು ಪರಿಶೀಲಿಸಿದ ನ್ಯಾಯಾಲಯದ ನ್ಯಾಯಾಧೀಶರಾದ ಜೆ. ಪ್ರೀತ್ ಅವರು, ಸುಧಾಕರ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಲು ನಿರ್ದೇಶನ ನೀಡಿದ್ದಾರೆ.
ಸಚಿವ ಡಾ. ಕೆ.ಸುಧಾಕರ್ ಅವರನ್ನು ಈ ಹಿಂದೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣಾ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಆಂಜನೇಯ ರೆಡ್ಡಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಧಾಕರ್ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ಮರಳುಕುಂಟೆ ಎಂಬಲ್ಲಿ ನಡೆದಿದ್ದ ಸಾರ್ವಜನಿಕ ಸಮಾರಂಭದಲ್ಲಿ ಆಂಜನೇಯ ರೆಡ್ಡಿ ವಿರುದ್ಧ ಅವಮಾನಕರವಾದ ಹೇಳಿಕೆ ನೀಡಿದ ಆರೋಪವಿದೆ.
ಈ ಸಂಬಂಧ ರೆಡ್ಡಿ ಸುಧಾಕರ್ ಅವರಿಗೆ ಲೀಗಲ್ ನೋಟಿಸ್ ಜಾರಿ ಮಾಡಿದ್ದರೂ, ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಹೀಗಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೂರು ನೀಡಿದ್ದರು. ಇದೀಗ ದೂರಿಗೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕರಣ ದಾಖಲಿಸಿ ವಿಚಾರಣೆಗೊಳಪಡಿಸಲು ನ್ಯಾಯಾಲಯ ಆದೇಶಿಸಿದೆ.
ಇದನ್ನೂ ಓದಿ:ಪಿಎಸ್‌ಐ ನೇಮಕಾತಿ ಅಕ್ರಮ: ಅಮೃತ್ ಪಾಲ್‌ಗೆ ಜಾಮೀನು ನಿರಾಕರಣೆ