ಬೆಂಗಳೂರು:ಅತ್ಯಾಚಾರ ಹಾಗೂ ಬಾಲ್ಯ ವಿವಾಹ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ, ನಗರದ 1ನೇ ತ್ವರಿತಗತಿ ನ್ಯಾಯಾಲಯ ಆದೇಶಿಸಿದೆ. ಕಮ್ಮನಹಳ್ಳಿ ನಿವಾಸಿ ಹರೀಶ್ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತನ ವಿರುದ್ಧದ ಅಪರಾಧಗಳು ಸಾಬೀತಾಗಿದ್ದು 1ನೇ ತ್ವರಿತಗತಿ ನ್ಯಾಯಾಲಯದ ನ್ಯಾಯಾಧೀಶೆ ಎನ್.ರೂಪ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ. ಅಲ್ಲದೇ, ಸಂತ್ರಸ್ತ ಬಾಲಕಿಗೆ 4 ಲಕ್ಷ ಪರಿಹಾರ ನೀಡುವಂತೆ ಕೆಎಸ್ಎಲ್ಎಸ್ಎಗೆ ನಿರ್ದೇಶಿಸಿದ್ದಾರೆ.
ಪ್ರಕರಣದ ಹಿನ್ನೆಲೆ:ಮಂಗಮ್ಮನಪಾಳ್ಯದಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದ ಹರೀಶ್ ಪರಿಶಿಷ್ಟ ಜಾತಿಗೆ ಸೇರಿದ ಬಾಲಕಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿದ್ದ. ಬಳಿಕ ಆಕೆಯನ್ನು ಅಪಹರಿಸಿ ಮೆಜೆಸ್ಟಿಕ್ನ ದೇವಸ್ಥಾನವೊಂದರಲ್ಲಿ ಅರಿಶಿನ ಕೊಂಬಿರುವ ದಾರ ಕಟ್ಟಿ ಕರೆದೊಯ್ದು ಅತ್ಯಾಚಾರ ಎಸಗಿದ್ದ. ನಂತರ ತಿರುಪತಿ, ಚೆನ್ನೈ, ಮಡಿಕೇರಿ ಮತ್ತಿತರೆಡೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಬಳಿಕ ಬೆಂಗಳೂರಿಗೆ ವಾಪಸ್ ಆಗಿ ಬಾಡಿಗೆ ಮನೆಯಲ್ಲಿರಿಸಿಕೊಂಡು ಅತ್ಯಾಚಾರ ಎಸಗಿದ್ದ ಎಂದು ಪ್ರಾಸಿಕ್ಯೂಷನ್ ಆರೋಪಿಸಿತ್ತು.