ಬೆಂಗಳೂರು: ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ‘ಬಿ’ ರಿಪೋರ್ಟ್ ಅನ್ನು ತಿರಸ್ಕರಿಸಿರುವ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಮಾಜಿ ಸಚಿವ ಕೆ.ಜೆ. ಜಾರ್ಜ್, ಹಿರಿಯ ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ.ಎಂ ಪ್ರಸಾದ್ ಅವರಿಗೆ ಸಮನ್ಸ್ ಜಾರಿ ಮಾಡಿದೆ.
ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯಕ್ಕೆ ಸಿಬಿಐ ಅಧಿಕಾರಿಗಳು 'ಬಿ' ರಿಪೋರ್ಟ್ ಸಲ್ಲಿಸಿ, ಪ್ರಕರಣವನ್ನು ಮುಕ್ತಾಯಗೊಳಿಸುವಂತೆ ಮನವಿ ಸಲ್ಲಿಸಿದ್ದರು. ಆದರೆ, ವರದಿ ಪರಿಶೀಲಿಸಿದ ನ್ಯಾಯಾಲಯ ಸಿಬಿಐ ವರದಿಯನ್ನು ತಿರಸ್ಕರಿಸಿದ್ದು, ಆರೋಪಿತರ ವಿರುದ್ಧ ಐಪಿಸಿ ಸೆಕ್ಷನ್ 306 ಅಡಿ ಪ್ರಕರಣ ದಾಖಲಿಸುವಂತೆ ಆದೇಶಿಸಿದೆ. ಹಾಗೆಯೇ ಆರೋಪಿತರಾದ ಕೆ.ಜೆ.ಜಾರ್ಜ್, ಪ್ರಣವ್ ಮೊಹಂತಿ ಹಾಗೂ ಎ.ಎಂ.ಪ್ರಸಾದ್ ಅವರಿಗೆ ಸೆ.28ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಸಿಬಿಐ ಅಧಿಕಾರಿಗಳು ಆರೋಪಿತರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ವರದಿ ಸಲ್ಲಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ನ್ಯಾಯಾಲಯ ಆತ್ಮಹತ್ಯೆ ಪ್ರಚೋದನೆಗೆ ಸಾಕಷ್ಟು ಸಾಕ್ಷ್ಯಗಳಿದ್ದರೂ ‘ಬಿ’ ವರದಿ ನೀಡಿರುವ ವಿಚಾರ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದು ಅಭಿಪ್ರಾಯಪಟ್ಟಿದೆ.
ಪ್ರಕರಣದ ಹಿನ್ನೆಲೆ:
ಮಂಗಳೂರಿನ ಐಜಿಪಿ ಕಚೇರಿಯಲ್ಲಿ ಡಿವೈಎಸ್‌ಪಿ ಆಗಿದ್ದ ಎಂ.ಕೆ. ಗಣಪತಿ ಅವರ ಮೃತದೇಹ 2016ರ ಜುಲೈ 7ರಂದು ಮಡಿಕೇರಿಯ ವಿನಾಯಕ ಲಾಡ್ಜ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅದಕ್ಕೂ ಮುನ್ನ ಸ್ಥಳೀಯ ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದ ಗಣಪತಿ, ಕಾಂಗ್ರೆಸ್ ಮುಖಂಡ ಕೆ.ಜೆ.ಜಾರ್ಜ್, ಹಿರಿಯ ಐಪಿಎಸ್ ಅಧಿಕಾರಿಗಳಾದ ಎ.ಎಂ.ಪ್ರಸಾದ್, ಪ್ರಣವ್ ಮೊಹಂತಿ ಕಿರುಕುಳ ನೀಡುತ್ತಿರುವ ಕುರಿತು ಆರೋಪ ಮಾಡಿದ್ದರು. ರಾಜ್ಯ ಸರ್ಕಾರ ಮೊದಲಿಗೆ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿತ್ತು. ಸಿಐಡಿ ಅಧಿಕಾರಿಗಳು ಆರೋಪಿತರಿಗೆ ಕ್ಲೀನ್ ಚಿಟ್ ನೀಡಿದ್ದರು. ಗಣಪತಿ ಕುಟುಂಬದವರು ಕಾನೂನು ಹೋರಾಟ ನಡೆಸಿದ್ದರಿಂದ 2017ರಲ್ಲಿ ಸುಪ್ರೀಂಕೋರ್ಟ್ ಪ್ರಕರಣವನ್ನು ಚೆನ್ನೈ ಸಿಬಿಐ ಅಧಿಕಾರಿಗಳಿಗೆ ವಹಿಸಿತ್ತು. ಪ್ರಕರಣದ ತನಿಖೆ ನಡೆಸಿದ ಚೆನ್ನೈನ ಸಿಬಿಐ ಅಧಿಕಾರಿಗಳು ಆರೋಪಿತರ ವಿರುದ್ಧ ಯಾವುದೇ ಸೂಕ್ತ ಸಾಕ್ಷ್ಯ ಲಭ್ಯವಿಲ್ಲ ಎಂದು ನ್ಯಾಯಾಲಯಕ್ಕೆ 'ಬಿ' ರಿಪೋರ್ಟ್ ಸಲ್ಲಿಸಿದ್ದರು.