ಬೆಂಗಳೂರು: ಕ್ರಿಮಿನಲ್ ಪ್ರಕರಣಗಳಲ್ಲಿ ತೀರ್ಪು ನೀಡುವ ಮುನ್ನ ನ್ಯಾಯಾಲಯಗಳು ಸುಪ್ರೀಂಕೋರ್ಟ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೈಕೋರ್ಟ್ ರಾಜ್ಯದ ಎಲ್ಲ ವಿಚಾರಣಾ ನ್ಯಾಯಾಲಯಗಳಿಗೆ ನಿರ್ದೇಶಿಸಿದೆ.
ಕೊಲೆ ಯತ್ನ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಹಾಗೂ 20 ಸಾವಿರ ರೂ. ದಂಡ ವಿಧಿಸಿ ತುಮಕೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನೀಡಿದ್ದ ತೀರ್ಪು ಪ್ರಶ್ನಿಸಿ ತುಮಕೂರಿನ ಶಿರಾದ ವೆಂಕಟಾಚಲ ಎಂಬುವರು ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು.
ಈ ಮೇಲ್ಮನವಿಯನ್ನು ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಹಾಗೂ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಪೀಠ ವಿಚಾರಣೆ ನಡೆಸಿತ್ತು. ಅಂತಿಮವಾಗಿ ತೀರ್ಪು ಪ್ರಕಟಿಸಿರುವ ಪೀಠ, ಸಾಮಾನ್ಯವಾಗಿ ಕೊಲೆ ಯತ್ನ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸುವುದಿಲ್ಲ. ಹಾಗಿದ್ದೂ ವಿಚಾರಣಾ ನ್ಯಾಯಾಲಯ ಈ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ. ಹೀಗಾಗಿ ವಿಚಾರಣಾ ನ್ಯಾಯಾಲಯಗಳು ಕ್ರಿಮಿನಲ್ ಪ್ರಕರಣಗಳಲ್ಲಿ ತೀರ್ಪು ನೀಡುವಾಗ ಸುಪ್ರೀಂಕೋರ್ಟ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.
ಜತೆಗೆ ರಾಜ್ಯದ ಎಲ್ಲ ವಿಚಾರಣಾ ನ್ಯಾಯಾಲಯಗಳು ಸುಪ್ರೀಂ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚಿಸಿ ಸುತ್ತೋಲೆಯೊಂದನ್ನು ಹೊರಡಿಸುವಂತೆ ಹೈಕೋರ್ಟ್ ರಿಜಿಸ್ಟ್ರಾರ್ಗೆ ನಿರ್ದೇಶಿದೆ.
ಅಲ್ಲದೆ, ಸೆಷನ್ಸ್ ಕೋರ್ಟ್ ಅರ್ಜಿದಾರರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹೊರಡಿಸಿದ್ದ ತೀರ್ಪನ್ನು ಅಮಾನತಿನಲ್ಲಿರಿಸಿ, ಆರೋಪಿಗೆ ಜಾಮೀನು ಮಂಜೂರು ಮಾಡಿದೆ. ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರರ ಪರ ವಾದ ಮಂಡಿಸಿದ್ದ ವಕೀಲ ಅರುಣ್ ಶಾಮ್, ಸಾಮಾನ್ಯವಾಗಿ ಐಪಿಸಿ ಸೆಕ್ಷನ್ 307ರ ಅಡಿಯಲ್ಲಿ ಬರುವ ಕೊಲೆಯತ್ನ ಪ್ರಕರಣಗಳಿಗೆ ವಿಚಾರಣಾ ನ್ಯಾಯಾಲಯಗಳು ಜೀವಾವಧಿ ಶಿಕ್ಷೆ ವಿಧಿಸುವುದಿಲ್ಲ. ತೀರಾ ಅಪರೂಪದ ಪ್ರಕರಣದಲ್ಲಿ ಮಾತ್ರ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಆದರೆ, ಈ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲು ಯಾವುದೇ ಬಲವಾದ ಆಧಾರಗಳಿಲ್ಲ. ತೀರ್ಪು ನೀಡುವಾಗ ಸುಪ್ರೀಂಕೋರ್ಟ್ ಮಾರ್ಗಸೂಚಿಗಳನ್ನು ಪರಿಗಣಿಸಿಲ್ಲ ಎಂದು ಪೀಠಕ್ಕೆ ವಿವರಿಸಿದ್ದರು.