ಕರ್ನಾಟಕ

karnataka

ETV Bharat / state

ಕೋವಿಡ್​ ನಿಯಮ ಉಲ್ಲಂಘಿಸಿ ಪ್ರತಿಭಟನೆ: ಕೃಷಿ ಸಚಿವರ ವಿರುದ್ಧ ದಾಖಲಾದ ಪ್ರಕರಣ ರದ್ದು - ಮೇಕೆದಾಟು ಅಣೆಕಟ್ಟು

ಮೇಕೇದಾಟು ಯೋಜನೆಗಾಗಿ ಕೋವಿಡ್ ನಿಯಮ ಉಲ್ಲಂಘಿಸಿ ಪ್ರತಿಭಟನೆ ಸಂಬಂಧ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ

High Court
ಹೈಕೋರ್ಟ್

By

Published : Aug 8, 2023, 7:23 AM IST

ಬೆಂಗಳೂರು:ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ಜಾರಿಗೆ ಆಗ್ರಹಿಸಿ ಪಾದೆಯಾತ್ರೆ ನಡೆಸಿದ್ದ ಸಂದರ್ಭದಲ್ಲಿ ಕೋವಿಡ್​ ನಿಯಮಗಳನ್ನು ಉಲ್ಲಂಘಿಸಿದ ಆರೋಪ ಕುರಿತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಕನಕಪುರ ತಾಲೂಕಿನ ಐಜೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಹಾಗೂ ನಗರದ 42ನೇ ಎಸಿಎಂಎಂ ನ್ಯಾಯಾಲಯದ ವಿಚಾರಣೆ ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.

ತಮ್ಮ ವಿರುದ್ಧದ ಎಫ್‌ಐಆರ್ ಮತ್ತು ಸಿಎಂಎಂ ನ್ಯಾಯಾಲಯ ವಿಚಾರಣೆ ರದ್ದುಪಡಿಸುವಂತೆ ಕೋರಿ ಸಚಿವ ಚಲುವರಾಯ ಸ್ವಾಮಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಇದೇ ಆರೋಪದ ಮೇಲೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಐಜೂರು ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ಅನ್ನು ಹೈಕೋರ್ಟ್ ಈ ಹಿಂದೆ ರದ್ದುಪಡಿಸಿತ್ತು. ಆ ಆದೇಶವನ್ನು ಪರಿಗಣಿಸಿದ ಇದೀಗ ಚಲುವರಾಯಸ್ವಾಮಿ ಮೇಲಿನ ಪ್ರಕರಣವನ್ನೂ ರದ್ದುಪಡಿಸಿ ಹೈಕೋರ್ಟ್ ಸೋಮವಾರ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ:ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ 2022ರ ಜ.9ರಿಂದ 10 ದಿನಗಳ ಪಾದಯಾತ್ರೆ ಹಮ್ಮಿಕೊಂಡಿತ್ತು. ಪಾದಯಾತ್ರೆಯಲ್ಲಿ ಕೋವಿಡ್​​ ನಿಯಮ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಚಲುವರಾಯಸ್ವಾಮಿ ವಿರುದ್ಧ ಐಜೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಪ್ರಕರಣ ಸಂಬಂಧ 42ನೇ ಎಸಿಎಂಎಂ ನ್ಯಾಯಾಲಯ 2023ರ ಮಾ.7ರಂದು ಸಚಿವರ ವಿರುದ್ಧ ಸಮನ್ಸ್ ಜಾರಿ ಮಾಡಿತ್ತು.

ಇದರಿಂದ ಹೈಕೋರ್ಟ್ ಮೆಟ್ಟಿಲೇರಿದ್ದ ಅವರು, ಕರ್ನಾಟಕ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸುವ ಮೂಲಕ ಕ್ರಮ ಕೈಗೊಳ್ಳಬೇಕು. ಆದರೆ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದಂತೆ ನಿರ್ದೇಶಿಸಿ ಪ್ರಕೃತಿ ವಿಕೋಪ ನಿರ್ವಹಣಾ ಕಾಯ್ದೆಯಡಿ ಸರ್ಕಾರ ನೋಟಿಫಿಕೇಷನ್ ಹೊರಡಿಸಿದೆ. ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ ಅಡಿ ಹೊರಡಿಸಿಲ್ಲ. ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಕ್ರಮ ಜರುಗಿಸಲು ಸರ್ಕಾರ ಮುಂದಾಗಿದ್ದು, ಅದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಹಾಗಾಗಿ, ತಮ್ಮ ವಿರುದ್ಧದ ಎಫ್‌ಐಆರ್, ಎಸಿಎಂಎಂ ನ್ಯಾಯಾಲಯದ ಸಮನ್ಸ್ ಮತ್ತು ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿದ್ದರು. ಆ ಮನವಿಯನ್ನು ಹೈಕೋರ್ಟ್ ಪುರಸ್ಕರಿಸಿದೆ.

ಸಲಹಾ ಸಮಿತಿ ರಚಿಸಿ ಸರ್ಕಾರ ಆದೇಶ: ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ (ಐಸಿಸಿ) ರಚಿಸಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ‌ ಉಸ್ತುವಾರಿ ಸಚಿವ‌ ಶಿವರಾಜ್ ತಂಗಡಗಿ ಅವರು ಸಮಿತಿಯ ಅಧ್ಯಕ್ಷರಾಗಿದ್ದಾರೆ.

ಸಚಿವರ‌ ಅಧ್ಯಕ್ಷತೆಯ ಸಮಿತಿಯಲ್ಲಿ ಬಳ್ಳಾರಿ, ಕೊಪ್ಪಳ, ರಾಯಚೂರು ಹಾಗೂ ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು ಸೇರಿ ಏಳು‌ ಮಂದಿ‌ ಸದಸ್ಯರನ್ನೊಳಗೊಂಡಿದೆ. ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರಾದ ಕ್ರಮವಾಗಿ ಡಾ.ಶರಣಪ್ರಕಾಶ್ ಪಾಟೀಲ್, ಬಿ.ನಾಗೇಂದ್ರ ಹಾಗೂ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಈ ನಾಲ್ಕು ಜಿಲ್ಲೆಯ ಲೋಕಸಭಾ ಸದಸ್ಯರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ವಿಶೇಷ ಆಹ್ವಾನಿತರಾಗಿದ್ದಾರೆ.

ಇದನ್ನೂ ಓದಿ:DKS: ಕೊರೋನಾ ನಿಯಮ ಉಲ್ಲಂಘನೆ... ಡಿಸಿಎಂ ಡಿಕೆಶಿ ವಿರುದ್ಧ ದಾಖಲಾದ ಪ್ರಕರಣ ರದ್ದು

ABOUT THE AUTHOR

...view details