ಬೆಂಗಳೂರು: ನಾಳೆಯಿಂದ ಈಗಾಗಲೇ ನೋಂದಾಯಿಸಿಕೊಂಡಿರುವ 18-44 ವರ್ಷ ವಯೋಮಾನದವರಿಗೆ ಕೋವಿಡ್-19 ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಸದಾಶಿವನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್‌ಸಿ.ವಿ.ರಾಮನ್ ಜನರಲ್, ಇಎಸ್‌ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18-44 ವರ್ಷದವರಿಗೆ ಕೋವಿಡ್ ಲಸಿಕೆ ವಿತರಿಸಲಾಗುವುದು. ಇತರೆ ಜಿಲ್ಲೆಗಳಲ್ಲಿ ಆರಂಭಿಕವಾಗಿ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಹಾಗೂ ಸರ್ಕಾರಿ ಮೆಡಿಕಲ್ ಕಾಲೇಜುಗಳಲ್ಲಿ 18-44 ವಯೋಮಾನದವರಿಗೆ ಲಸಿಕೆ ನೀಡಲಾಗುವುದು. ಲಸಿಕೆ ಪೂರೈಕೆ ಹೆಚ್ಚಾಗುತ್ತಿದ್ದಂತೆ, ಮುಂದಿನ ದಿನಗಳಲ್ಲಿ ಇನ್ನಷ್ಟು ಲಸಿಕೆ ಕೇಂದ್ರಗಳಲ್ಲಿ ವಿತರಣೆ ಆರಂಭಿಸಲಾಗುವುದು ಎಂದು ವಿವರಿಸಿದರು.
18-44 ವಯೋಮಾನದವರಿಗೆ ಲಸಿಕೆ ವಿತರಿಸುವ ಎಲ್ಲಾ ಕೇಂದ್ರಗಳಲ್ಲಿ ಈ ಗುಂಪಿನವರಿಗೆ ಪ್ರತ್ಯೇಕ ಸ್ಥಳ ಗುರುತಿಸಲಾಗುವುದು. ಕೋವಿಡ್ ಅಥವಾ ಆರೋಗ್ಯ ಸೇತು ಆ್ಯಪ್ ಮೂಲಕ ನೋಂದಣಿ ಮಾಡಿಸಿ, ಸಮಯ ನಿಗದಿ ಮಾಡಿಕೊಂಡಿರುವವರಿಗೆ ಮಾತ್ರ ಲಸಿಕೆ ನೀಡಲಾಗುವುದು. ನೋಂದಣಿ ಇಲ್ಲದೆ ನೇರವಾಗಿ ಲಸಿಕೆ ಕೇಂದ್ರಕ್ಕೆ ಬರುವವರಿಗೆ ಅವಕಾಶವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.