ಬೆಂಗಳೂರು: ಸರ್ಕಾರಿ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ವಹಿಸಲು, ದಂಡನೆ ವಿಧಿಸಲು ಸಂಬಂಧಿಸಿದಂತೆ ಲೋಕಾಯುಕ್ತರ ಶಿಫಾರಸುಗಳ ಪರಾಮರ್ಶೆಗಾಗಿ ಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ.
ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಎ ವೃಂದದ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ವಹಿಸುವುದಕ್ಕೆ, ದಂಡನೆ ವಿಧಿಸುವುದಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರು, ಉಪ ಲೋಕಾಯುಕ್ತರ ಶಿಫಾರಸ್ಸುಗಳನ್ನು ತಿರಸ್ಕರಿಸುವ ಅಥವಾ ಮಾರ್ಪಡಿಸುವ ಪ್ರಸ್ತಾವನೆಗಳ ಕುರಿತು ಪರಾಮರ್ಶಿಸಲು ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ಡಿಸಿಎಂ ಗೋವಿಂದ ಕಾರಜೋಳ ಸಂಪುಟ ಉಪಸಮಿತಿಯ ಅಧ್ಯಕ್ಷರಾಗಿರಲಿದ್ದಾರೆ. ಸಚಿವರಾದ ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್, ಎಸ್. ಸುರೇಶ್ ಕುಮಾರ್, ಮಾಧುಸ್ವಾಮಿ ಮತ್ತು ಶಶಿಕಲಾ ಜೊಲ್ಲೆ ಉಪಸಮಿತಿಯ ಸದಸ್ಯರಾಗಿರಲಿದ್ದಾರೆ.
ಗ್ರೂಪ್-ಎ ವೃಂದದ ಅಧಿಕಾರಿಗಳ ವಿರುದ್ಧ ಶಿಸ್ತು ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತರು, ಉಪ ಲೋಕಾಯುಕ್ತರ ಶಿಫಾರಸ್ಸುಗಳನ್ನು ತಿರಸ್ಕರಿಸುವ ಅಥವಾ ಮಾರ್ಪಡಿಸುವ ಅನೇಕ ಪ್ರಸ್ತಾವನೆಗಳನ್ನು ಸಚಿವ ಸಂಪುಟದ ಮುಂದೆ ಮಂಡಿಸಲಾಗುತ್ತಿರುವ ಹಿನ್ನೆಲೆಯಲ್ಲಿ, ಈ ಕುರಿತು ಪರಾಮರ್ಶಿಸಲು ಸಚಿವ ಸಂಪುಟ ಸಭೆ ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಿತ್ತು. ಅದರಂತೆ ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗಿದೆ.
ಗ್ರೂಪ್-ಎ ವೃಂದದ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ವಹಿಸುವುದಕ್ಕೆ, ದಂಡನೆ ವಿಧಿಸುವುದಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತರು, ಉಪ ಲೋಕಾಯುಕ್ತರ ಶಿಫಾರಸ್ಸುಗಳನ್ನು ತಿರಸ್ಕರಿಸುವ ಅಥವಾ ಮಾರ್ಪಡಿಸುವ ಪ್ರಸ್ತಾವನೆಗಳನ್ನು ಸಚಿವ ಸಂಪುಟ ಸಮಿತಿ ಮುಂದೆ ಮಂಡಿಸಲು ಸಂಬಂಧಿಸಿದ ಆಡಳಿತ ಇಲಾಖೆಗಳು ಒಂದು ಸಂಕ್ಷಿಪ್ತ ಟಿಪ್ಪಣಿಯನ್ನು ತಯಾರಿಸಬೇಕು. ಅದನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ವಿಜಿಲೆನ್ಸ್)ಗೆ ಕಳುಹಿಸಬೇಕು. ಅಂತಹ ಪ್ರಸ್ತಾವನೆಗಳನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸಚಿವ ಸಂಪುಟದ ಉಪಸಮಿತಿ ಮುಂದೆ ಮಂಡಿಸುಬೇಕು ಮತ್ತು ಸಭೆಯ ನಂತರ ಸಭಾ ನಡವಳಿಗಳನ್ನು ತಯಾರಿಸಿ ಸಂಬಂಧಿಸಿದವರಿಗೆ ಕಳುಹಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಲೋಕಾಯುಕ್ತರು, ಉಪ ಲೋಕಾಯುಕ್ತರ ಶಿಫಾರಸ್ಸಿನಂತೆ ಕ್ರಮ ಕೈಗೊಳ್ಳಲು ಉಪ ಸಮಿತಿ ನಿರ್ಧರಿಸಿದಲ್ಲಿ, ಇಂತಹ ಪ್ರಸ್ತಾವನೆಗಳಿಗೆ ಸಂಬಂಧಿಸಿದ ಆಡಳಿತ ಇಲಾಖೆಯು ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಬೇಕು. ಮತ್ತು ಸಚಿವ ಸಂಪುಟದ ಅನುಮೋದನೆ ಅವಶ್ಯವಿದ್ದಲ್ಲಿ ಸಚಿವ ಸಂಪುಟಕ್ಕೆ ಪ್ರಸ್ತಾವನೆ ಮಂಡಿಸಬೇಕು ಎಂದು ತಿಳಿಸಲಾಗಿದೆ. ಸಚಿವ ಸಂಪುಟ ಉಪಸಮಿತಿ ಸಭೆಗೆ ಮಂಡಿಸುವ ಪ್ರಸ್ತಾವನೆಗಳಿಗೆ ಸಂಬಂಧಿಸಿದ ಇಲಾಖೆಯ ಕಾರ್ಯದರ್ಶಿಯವರು ಖುದ್ದು ಹಾಜರಾಗಿ ಉಪ ಸಮಿತಿಗೆ ಮಾಹಿತಿ ಒದಗಿಸಬೇಕು ಎಂದು ಮುಖ್ಯ ಕಾರ್ಯದರ್ಶಿ ನಿರ್ದೇಶನ ನೀಡಿದ್ದಾರೆ.