ಬೆಂಗಳೂರು:ಸಾಮಾನ್ಯವಾಗಿ ರಾಜಕೀಯ ನಾಯಕರು, ಪೊಲೀಸ್ ಅಧಿಕಾರಿಗಳು, ಸಿನಿಮಾ ತಾರೆಗಳು ಹೆಸರಿನಲ್ಲಿ ನಕಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ಸೃಷ್ಟಿಸುತ್ತಿದ್ದ ಸೈಬರ್ ವಂಚಕರು ಇದೀಗ ರಾಜ್ಯಪಾಲರ ಹೆಸರಿನಲ್ಲಿಯೂ ನಕಲಿ ಖಾತೆ ತೆರೆದಿರುವ ವಿಚಾರ ಬೆಳಕಿಗೆ ಬಂದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ರ ಫೋಟೋ, ಹೆಸರು ಬಳಸಿಕೊಂಡು ನಕಲಿ ಫೇಸ್‌ಬುಕ್ ಖಾತೆ ತೆರೆಯಲಾಗಿದ್ದು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ನೀಡಿರುವ ದೂರಿನನ್ವಯ ಪ್ರಕರಣ ದಾಖಲಾಗಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ (ಕೆಪಿಸಿಸಿ) ಹೆಸರಿನಲ್ಲಿ ನಕಲಿ ವೆಬ್‌ಸೈಟ್:ಕೆಪಿಸಿಸಿ ಹೆಸರಿನಲ್ಲಿ ನಕಲಿ ವೆಬ್ಸೈಟ್ನ್ನು ಮೂವರು ಸೃಷ್ಟಿಸಿದ್ದರು. ಆ ಮೂವರು ಆರೋಪಿಗಳನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ವೆಂಕಟೇಶ್, ಧರಣೇಶ್ ಹಾಗೂ ಸಿದ್ದಾರ್ಥ್. ಕೆಪಿಸಿಸಿ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ, ಅದರ ಮೂಲಕ ಕಾಂಗ್ರೆಸ್ ಪಕ್ಷ ಹಾಗೂ ಪಕ್ಷದ ನಾಯಕರಿಗೆ ಅಗೌರವ ತರುವಂತಹ ಹೇಳಿಕೆಗಳನ್ನು ಪ್ರಕಟಿಸಲಾಗುತ್ತಿದೆ ಎಂದು ಕೆಪಿಸಿಸಿ ಕಾನೂನು ವಿಭಾಗದ ಕಾರ್ಯಕಾರಿ ಸಮಿತಿ ಸದಸ್ಯ ಶತಭಾಷ್ ಶಿವಣ್ಣ ಕಳೆದ ಫೆಬ್ರವರಿಯಲ್ಲಿ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದರು.
ಈ ಸಂಬಂಧ ಅಂದಿನ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಯವರಿಗೂ ದೂರು ಸಲ್ಲಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದರು. ದೂರಿನನ್ವಯ ಐಟಿ ಆ್ಯಕ್ಟ್ ಹಾಗೂ ಐಪಿಸಿ ಸೆಕ್ಷನ್ನಡಿ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರ್ ಕ್ರೈಂ ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಅವರಲ್ಲಿ ಮೂವರ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು. ಠಾಣಾ ಜಾಮೀನಿನ ಆಧಾರದಲ್ಲಿ ನೋಟಿಸ್ ನೀಡಿ ಕಳಿಸಲಾಗಿದೆ ಎಂದು ಸಿಸಿಬಿಯ ಜಂಟಿ ಪೊಲೀಸ್ ಆಯುಕ್ತ ಡಾ. ಎಸ್ ಡಿ ಶರಣಪ್ಪ ತಿಳಿಸಿದ್ದರು.