ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯ ವಿವಿಧ ಸೆಕ್ಷನ್ಗಳಡಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಕೇಂದ್ರೀಯ ತನಿಖೆ ದಳಕ್ಕೆ (ಸಿಬಿಐ) ಈ ಹಿಂದಿನ ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಸರ್ಕಾರದ ಈ ನಿರ್ಧಾರಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಮಧ್ಯಪ್ರವೇಶಿಸಲು ಕೋರಿ ಸಿಬಿಐ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಲು ಇಂದು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಹೈಕೋರ್ಟ್ ಈ ಕುರಿತು ಸಂಪೂರ್ಣ ವಿಚಾರಣೆ ನಡೆಸಿದ ಬಳಿಕವಷ್ಟೇ ನಾವು ವಿಚಾರಣೆ ನಡೆಸುತ್ತೇವೆ ಎಂದು ಕೋರ್ಟ್ ಸ್ಪಷ್ಪಪಡಿಸಿದೆ.
ಡಿ.ಕೆ.ಶಿವಕುಮಾರ್ ಅವರ ವಿರುದ್ಧ ತನಿಖೆ ನಡೆಸಲು ಕೇಂದ್ರೀಯ ತನಿಖಾ ದಳಕ್ಕೆ ಅನುಮತಿಸಿ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು 2019ರ ಸೆಪ್ಟೆಂಬರ್ 25ರಂದು ಅನುಮತಿಸಿತ್ತು. ರಾಜ್ಯ ಗೃಹ ಇಲಾಖೆಯ ಆದೇಶವನ್ನು ವಜಾ ಮಾಡಬೇಕೆಂದು ಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿಯನ್ನು 2023ರ ಏಪ್ರಿಲ್ 20ರಂದು ನ್ಯಾ.ಆರ್.ನಟರಾಜನ್ ಅವರಿದ್ದ ಏಕಸದಸ್ಯ ಪೀಠ ವಜಾ ಮಾಡಿತ್ತು. ಏಕಸದಸ್ಯ ಪೀಠದ ಆದೇಶವನ್ನು ವಿಭಾಗೀಯ ಪೀಠದಲ್ಲಿ ಡಿಕೆಶಿ ಪ್ರಶ್ನಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ದ್ವಿಸದಸ್ಯ ಪೀಠ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ಪ್ರಕರಣದ ಹಿನ್ನೆಲೆ :ಡಿ.ಕೆ.ಶಿವಕುಮಾರ್ ಗಣಿಗಾರಿಕೆ ಮತ್ತು ರಿಯಲ್ ಎಸ್ಟೇಟ್ ಉದ್ಯಮ ಸೇರಿದಂತೆ ಹಲವು ತೊಡಗಿಕೊಂಡಿದ್ದು, ಅವರಿಗೆ ದೆಹಲಿ ಸೇರಿದಂತೆ ವಿವಿಧ ಸ್ಥಳಗಳ ಮೇಲೆ 2017ರ ಆಗಸ್ಟ್ 2ರಂದು ಆದಾಯ ತೆರಿಗೆ ಇಲಾಖೆ ಶೋಧ ನಡೆಸಿತ್ತು. ಇದರ ಬೆನ್ನಲ್ಲೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಕಾಯಿದೆ ಅಡಿ ಪ್ರಕರಣ ದಾಖಲಿಸಿತ್ತು. ಇದನ್ನು ಆಧರಿಸಿ 2019ರ ಸೆಪ್ಟೆಂಬರ್ 3ರಂದು ಡಿಕೆಶಿ ಅವರನ್ನು ಬಂಧಿಸಲಾಗಿತ್ತು. ಆ ನಂತರ 2019ರ ಸೆಪ್ಟೆಂಬರ್ 9ರಂದು ಜಾರಿ ನಿರ್ದೇಶನಾಲಯದ ಪತ್ರ ಆಧರಿಸಿ, ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ತನಿಖೆ ನಡೆಸಲು ಸಿಬಿಐಗೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು.