ಬೆಂಗಳೂರು: ಬಿಬಿಎಂಪಿ ಶಾಲೆಗಳನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಹಸ್ತಾಂತರ ಹಾಗೂ ಹೊಸದಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸುವ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ನೇತೃತ್ವದಲ್ಲಿಂದು ಮಹತ್ವದ ಸಭೆ ನಡೆಯಿತು. ನೃಪತುಂಗ ರಸ್ತೆಯಲ್ಲಿರುವ ಸಮಗ್ರ ಶಿಕ್ಷಣ ಇಲಾಖೆ ಕಚೇರಿಯಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಬಿಬಿಎಂಪಿ ಶಾಲೆಗಳ ಸ್ಥಿತಿಗತಿಗಳ ಕುರಿತು ಚರ್ಚೆ ನಡೆಯಿತು.
ಬಿಬಿಎಂಪಿ ನಿರ್ವಹಣೆಯಲ್ಲಿ 142 ನರ್ಸರಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, 17 ಪಿಯು ಕಾಲೇಜುಗಳಿದ್ದು, ಅವುಗಳಲ್ಲಿ 23 ಸಾವಿರಕ್ಕೂ ಹೆಚ್ಚಿನ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಆದರೆ, ವಿದ್ಯಾರ್ಥಿಗಳ ಸಂಖ್ಯೆಗೆ ತಕ್ಕಂತೆ ಶಿಕ್ಷಕರಿಲ್ಲದಿರುವುದು ಹಾಗೂ ಪ್ರತಿ ವರ್ಷ ಫಲಿತಾಂಶದಲ್ಲಿ ಬಿಬಿಎಂಪಿ ಶಾಲೆಗಳು ಹಿಂದೆ ಬೀಳುತ್ತಿರುವ ಕುರಿತು ಪ್ರಸ್ತಾಪವಾಯಿತು. ಶಾಲೆಗಳ ನಿರ್ವಹಣೆಗೆ ಬಿಬಿಎಂಪಿಗೆ ಸಾಕಷ್ಟು ಕಷ್ಟವಾಗುತ್ತಿದೆ ಎನ್ನುವ ಕಾರಣಗಳಿಂದಾಗಿ ಬಿಬಿಎಂಪಿ ನಿರ್ವಹಣೆಯಲ್ಲಿನ ಶಾಲೆಗಳನ್ನು ಶಿಕ್ಷಣ ಇಲಾಖೆಗೆ ವಹಿಸುವ ಸಂಬಂಧ ಸಾಧಕ-ಬಾಧಕಗಳ ಕುರಿತು ಚರ್ಚಿಸಲಾಯಿತು.
ಇದರ ಜೊತೆಗೆ ರಾಜ್ಯದಲ್ಲಿ ಹೊಸದಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸುವ ಸಂಬಂಧ ಸಮಾಲೋಚನೆ ನಡೆಯಿತು. ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಹೆಚ್ಚಿನ ಬೇಡಿಕೆಗಳು ಬಂದಿರುವ ಹಿನ್ನೆಯಲ್ಲಿ ಹೊಸದಾಗಿ ಶಾಲೆಗಳ ಆರಂಭಕ್ಕೆ ಕಾಂಗ್ರೆಸ್ ಸರ್ಕಾರ ಬಂದ ನಂತರ ಪ್ರಸ್ತಾವನೆ ಸ್ವೀಕರಿಸುವ ನಿರ್ಧಾರ ಪ್ರಕಟಿಸಿತ್ತು. ಅದರಂತೆ ಮನವಿಗಳು ಬಂದ ಹಿನ್ನೆಲೆಯಲ್ಲಿ ಹೊಸ ಶಾಲೆಗಳ ಆರಂಭ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು. ರಾಜ್ಯದಲ್ಲಿ ಪ್ರಸ್ತುತ 285 ಕರ್ನಾಟಕ ಪಬ್ಲಿಕ್ ಶಾಲೆಗಳಿದ್ದು, ಮತ್ತಷ್ಟು ಶಾಲೆಗಳ ಆರಂಭದ ಕುರಿತು ಸಮಾಲೋಚನೆ ನಡೆಸಲಾಯಿತು. ಒಂದೇ ಸೂರಿನಡಿ ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವದವರೆಗೂ ಶಿಕ್ಷಣ ನೀಡುವ ಸಲುವಾಗಿ ಹಂತಹಂತವಾಗಿ ಒಟ್ಟು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಸ್ಥಾಪಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿರುವ ಹಿನ್ನಲೆಯಲ್ಲಿ ಬೇಡಿಕೆ ಇರುವ ಜಿಲ್ಲೆಗಳಲ್ಲಿ ಹೊಸದಾಗಿ ಇನ್ನಷ್ಟು ಕೆಪಿಎಸ್ ಶಾಲೆಗಳನ್ನು ತೆರೆಯುವ ಕುರಿತು ಮಾತುಕತೆ ನಡೆಯಿತು.