ಬೆಂಗಳೂರು: "ಜೆಡಿಎಸ್ ಬೆಂಬಲ ನೀಡುವ ಕಾಲದಲ್ಲೇ ಬೆಂಬಲ ನೀಡಲಿಲ್ಲ. ಈಗೇನು ಬೆಂಬಲ ನೀಡುತ್ತಾರೆ?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ. ಡಿ ಕೆ ಶಿವಕುಮಾರ್ ನಾಳೆಯೇ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ನ 19 ಶಾಸಕರು ಬೆಂಬಲ ನೀಡುತ್ತೇವೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, "ಕುಮಾರಸ್ವಾಮಿ ಅವರು ಎನ್ಡಿಎ ಮೈತ್ರಿಕೂಟದವರು. ನಮಗೂ ಎನ್ಡಿಎಗೂ ಸಂಬಂಧವಿಲ್ಲ. ಮೊದಲು ಎನ್ಡಿಎಯಿಂದ ಆಚೆ ಬಂದು ನಂತರ ಬೆಂಬಲದ ಬಗ್ಗೆ ಮಾತನಾಡಲಿ" ಎಂದು ತಿರುಗೇಟು ನೀಡಿದ್ದಾರೆ.
"ಕುಮಾರಸ್ವಾಮಿ ಅವರ ಮಾತು ಕೇಳಿ ಬಹಳ ಸಂತೋಷವಾಗಿದೆ. ಸದ್ಯ ನಮಗೆ ರಾಜ್ಯದ ಜನತೆ 136 ಸೀಟುಗಳ ಜೊತೆ ಅಧಿಕಾರ ಕೊಟ್ಟಿದ್ದಾರೆ. ಅವರು ಉತ್ತಮ ವಿರೋಧ ಪಕ್ಷದ ನಾಯಕನಾಗಿ ಸರ್ಕಾರವನ್ನು ತಿದ್ದುವ ಕೆಲಸ ಮಾಡಲಿ. ಟೀಕೆ ಮಾಡುವುದನ್ನು ಬಿಟ್ಟು, ಸರ್ಕಾರವನ್ನು ತಿದ್ದಲಿ. ಕಾಂಗ್ರೆಸ್ ಹಾಗೂ ಬಿಜೆಪಿ ತಲಾ ಒಂದೊಂದು ಬಾರಿ ಅವರನ್ನು ಮುಖ್ಯಮಂತ್ರಿ ಮಾಡಿದೆ. ಅವರ ತಂದೆಯವರನ್ನು ಕಾಂಗ್ರೆಸ್ ಪ್ರಧಾನಮಂತ್ರಿ ಮಾಡಿದೆ. ಅವರಿಗಿರುವ ಅಪಾರ ಅನುಭವದ ಮೂಲಕ ನಮಗೆ ಮಾರ್ಗದರ್ಶನ ನೀಡಲಿ. ಈಗ ಜನ ನಮಗೆ ಆಶೀರ್ವಾದ ಮಾಡಿದ್ದಾರೆ. ಅವರ ಪ್ರೀತಿ ವಿಶ್ವಾಸಕ್ಕೆ ನಮಸ್ಕಾರ" ಎಂದು ತಿಳಿಸಿದರು.
ಇದನ್ನೂ ಓದಿ:ಸಿಎಂ ಸ್ಥಾನಕ್ಕೆ ಶೀತಲ ಸಮರ.. ಮುಂದೆ ಭೀಕರ ಯುದ್ಧವೂ ನಡೆಯಲಿದೆ: ಬಿ.ವೈ. ವಿಜಯೇಂದ್ರ ವ್ಯಂಗ್ಯ