ಕರ್ನಾಟಕ

karnataka

ETV Bharat / state

ಬಿಬಿಎಂಪಿ ಶಾಲೆಗಳು ಶಿಕ್ಷಣ ಇಲಾಖೆಯ ಸುಪರ್ದಿಗೆ: ಡಿಸಿಎಂ ಡಿ.ಕೆ.ಶಿವಕುಮಾರ್ - etv bharat karnataka

ಖಾಸಗಿ ಶಾಲೆಗಳಿಗೆ ಸರಿಸಮನಾಗಿ ಗುಣಮಟ್ಟದ ಶಿಕ್ಷಣ ನೀಡಲು ಬಿಬಿಎಂಪಿ ಶಾಲೆಗಳನ್ನು ಶಿಕ್ಷಣ ಇಲಾಖೆಯ ಸುಪರ್ದಿಗೆ ನೀಡಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

dcm-dk-shivakumar-announced-bbmp-schools-are-handed-over-to-education-department
ಬಿಬಿಎಂಪಿ ಶಾಲೆಗಳು ಇನ್ನು ಮುಂದೆ ಶಿಕ್ಷಣ ಇಲಾಖೆ ಸುಪರ್ದಿಗೆ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಕಟ

By ETV Bharat Karnataka Team

Published : Dec 22, 2023, 10:33 PM IST

ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಶಾಲೆಗಳನ್ನು ಇನ್ನು ಮುಂದೆ ಶಿಕ್ಷಣ ಇಲಾಖೆ ಸುಪರ್ದಿಗೆ ನೀಡಲು ತೀರ್ಮಾನಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ನೃಪತುಂಗ ರಸ್ತೆಯಲ್ಲಿರುವ ಸಮಗ್ರ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಇಂದು ನಡೆದ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿ ವರ್ಷ ಫಲಿತಾಂಶದಲ್ಲಿ ಬಿಬಿಎಂಪಿ ಶಾಲೆಗಳಲ್ಲಿ ಕುಸಿತ ಕಂಡಿರುವುದನ್ನು ನಾವು ಗಮನಿಸಿದ್ದೇವೆ. ಇದಕ್ಕೆ ಅವಕಾಶ ನೀಡಬಾರದು. ಖಾಸಗಿ ಶಾಲೆಗಳಿಗೆ ಸರಿಸಮನಾಗಿ ಗುಣಮಟ್ಟದ ಶಿಕ್ಷಣ ನೀಡಲು ಈ ತೀರ್ಮಾನ ಮಾಡಲಾಗಿದೆ ಎಂದರು.

ಶಾಲೆಗಳಲ್ಲಿ ಶಿಕ್ಷಣ ನೀಡುವಂತಹ ಜವಾಬ್ದಾರಿಯನ್ನು ಮಾತ್ರ ಶಿಕ್ಷಣ ಇಲಾಖೆಗೆ ನೀಡಲಾಗುತ್ತಿದ್ದು, ಈ ಶಾಲೆಗಳ ಮೂಲಸೌಕರ್ಯಗಳ ಉನ್ನತೀಕರಣ ಹಾಗೂ ನಿರ್ವಹಣೆಯನ್ನು ಬಿಬಿಎಂಪಿಯಿಂದಲೇ ಮಾಡಲಾಗುವುದು. ಶಾಲೆಯ ಜಾಗ, ಕಟ್ಟಡ ನಿರ್ವಹಣೆ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯವನ್ನು ಪಾಲಿಕೆಯಿಂದಲೇ ನಿರ್ವಹಿಸಲಾಗುವುದು. ಗುಣಮಟ್ಟದ ಶಿಕ್ಷಣ ನೀಡುವ ಜವಾಬ್ದಾರಿಯನ್ನು ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದರು.

500 ಕೆಪಿಎಸ್ ಶಾಲೆ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ:ಸಿಎಸ್ಆರ್ ನಿಧಿಯ ಮೂಲಕ ಪಂಚಾಯಿತಿ ಮಟ್ಟದಲ್ಲಿ 2 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣ ಮಾಡುವ ಗುರಿ ಸರ್ಕಾರದ ಮುಂದಿದ್ದು, ಮೊದಲ ವರ್ಷ 500 ಶಾಲೆಗಳ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ. ಮುಂದಿನ ತಿಂಗಳು ಮೊದಲನೇ ಅಥವಾ ಎರಡನೇ ವಾರದಲ್ಲಿ ಎಲ್ಲಾ ಸಿಎಸ್ಆರ್ ಕಂಪನಿಗಳನ್ನು ಕರೆದು ಅವರಿಗೆ ಈ ಶಾಲೆಗಳ ನಿರ್ಮಾಣ ಯೋಜನೆಗಳನ್ನು ನೀಡುತ್ತೇವೆ. ಅವರು ನಮಗೆ ಗುಣಮಟ್ಟದ ಮೂಲಸೌಕರ್ಯವಿರುವ ಶಾಲೆಗಳನ್ನು ನಿರ್ಮಿಸಿ ಕೊಡಲಿದ್ದಾರೆ. ಪ್ರತಿ ಶಾಲೆಯ ಮೂಲಭೂತ ಸೌಕರ್ಯಕ್ಕೆ ಕನಿಷ್ಠ 4 ಕೋಟಿಯಿಂದ 7 ಕೋಟಿ ರೂ.ವರೆಗೂ ವೆಚ್ಚವಾಗಲಿದೆ. ನಾವು ಈಗಾಗಲೇ ಕೆಲವು ಕಂಪನಿಗಳ ಜತೆ ಚರ್ಚೆ ಮಾಡಿದ್ದು, ಮತ್ತೊಂದು ಸುತ್ತಿನ ಸಭೆ ಮಾಡುತ್ತೇವೆ ಎಂದರು.

ಕಂಪನಿ ಅಥವಾ ಸಂಸ್ಥೆಗಳು ಸರ್ಕಾರಕ್ಕೆ ಸಿಎಸ್ಆರ್ ಹಣ ನೀಡುವ ಅಗತ್ಯವಿಲ್ಲ. ಶಾಲೆ ನಿರ್ಮಾಣಕ್ಕೆ ಬೇಕಾದ ಭೂಮಿಯನ್ನು ಕನಿಷ್ಠ 2 ಎಕರೆಯಿಂದ ಮೂರ್ನಾಲ್ಕು ಎಕರೆಯಷ್ಟು ಜಾಗವನ್ನು ಸರ್ಕಾರ ನೀಡಲಿದ್ದು, ಅಲ್ಲಿ ಈ ಸಂಸ್ಥೆಗಳು ಶಾಲೆ ನಿರ್ಮಿಸಲಿವೆ. ಶಾಲೆಯಲ್ಲಿ ಲೈಬ್ರರಿ, ತರಗತಿ, ಪ್ರಯೋಗಾಲಯ, ಶೌಚಾಲಯ ಸೇರಿದಂತೆ ಎಲ್ಲದರ ಯೋಜನೆ ನೀಡಲಾಗುವುದು. ಅವರು ಬೇಕೆಂದರೆ ಇನ್ನು ಉತ್ತಮ ಯೋಜನೆ ಮಾಡಿಕೊಂಡು ಶಾಲೆ ನಿರ್ಮಾಣ ಮಾಡಬಹುದು. ಈ ಬಗ್ಗೆ ರಾಮನಗರ ಜಿಲ್ಲೆಯಲ್ಲಿ ಪ್ರಯೋಗ ಆರಂಭವಾಗಿದೆ ಎಂದು ಹೇಳಿದರು.

ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದವರ ವಿರುದ್ಧ ಕಾನೂನು ಕ್ರಮ:ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣದಲ್ಲಿ ಸರ್ಕಾರ ಕಾನೂನು ಕ್ರಮಕೈಗೊಂಡಿದ್ದು, ಸಂಬಂಧಪಟ್ಟವರನ್ನು ಅಮಾನತು ಮಾಡಲಾಗಿದೆ. ಈ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು, ನಮ್ಮ ದೇಶದಲ್ಲಿ ಇಂತಹ ಘಟನೆಗಳಿಗೆ ಅವಕಾಶವಿಲ್ಲ. ಯಾರೇ ತಪ್ಪು ಮಾಡಿದರೂ ಕಾನೂನು ರೀತಿ ಕ್ರಮ ಕೈಗೊಳ್ಳುತ್ತೇವೆ ಎಂದು ಡಿಸಿಎಂ ಸ್ಪಷ್ಟಪಡಿಸಿದರು .

ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಗುರುತಿಸಿದ್ದು, ಸಂಚಾರದ ಸಮಸ್ಯೆ ಇರುವುದಿಲ್ಲವೇ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ, ನಾವು ಮನೆ ಬಾಗಿಲಲ್ಲೇ ಶಾಲೆ ಆರಂಭಿಸಲು ಆಗುವುದಿಲ್ಲ. ಸ್ಥಳೀಯ ಮಟ್ಟದಲ್ಲಿ ಅದರ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಬೆಂಗಳೂರು ಅಥವಾ ಇತರೆ ನಗರಗಳಿಗೆ ವಲಸೆ ಬರುವುದನ್ನು ತಪ್ಪಿಸುವ ಉದ್ದೇಶದಿಂದ ಪಂಚಾಯಿತಿ ಮಟ್ಟದಲ್ಲಿ ಶಾಲೆ ಮಾಡುತ್ತಿದ್ದೇವೆ. ಕೆಲವು ಕಡೆಗಳಲ್ಲಿ ಬಸ್ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:ಬಿಬಿಎಂಪಿ ಶಾಲೆಗಳನ್ನು ಶಿಕ್ಷಣ ಇಲಾಖೆಗೆ ಹಸ್ತಾಂತರಿಸುವ ವಿಚಾರ: ಡಿಸಿಎಂ ನೇತೃತ್ವದಲ್ಲಿ ಸಭೆ

ABOUT THE AUTHOR

...view details