ಕರ್ನಾಟಕ

karnataka

ETV Bharat / state

ಆಸೆ ಪಡುವುದು, ಜನರಿಗೆ ಶಕ್ತಿ ನೀಡುವಂತೆ ಕೇಳುವುದು ತಪ್ಪಲ್ಲ; ಯತೀಂದ್ರ ಹೇಳಿಕೆಗೆ ಡಿಸಿಎಂ ಪ್ರತಿಕ್ರಿಯೆ

DCM DK Shivakumar React: ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್

By ETV Bharat Karnataka Team

Published : Jan 17, 2024, 4:51 PM IST

ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಯತೀಂದ್ರ ಅವರು ಜವಾಬ್ದಾರಿಯುತ ನಾಯಕ. ತಮಗೆ ಶಕ್ತಿ ನೀಡುವಂತೆ ಜನರನ್ನು ಕೇಳುವುದು ಸ್ವಾಭಾವಿಕ. ಅವರ ಹೇಳಿಕೆ ತಿರುಚುವ ಅಗತ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಲೋಕಸಭೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆದ್ದರೆ ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂಬ ಯತೀಂದ್ರ ಹೇಳಿಕೆ ಬಗ್ಗೆ ಕುಮಾರಕೃಪ ಅತಿಥಿ ಗೃಹದ ಬಳಿ ಇಂದು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ನಮ್ಮ ಸರ್ಕಾರ ಐದು ವರ್ಷ ಬಲಿಷ್ಠವಾಗಿರುತ್ತದೆ. ಸಿದ್ದರಾಮಯ್ಯ ಅವರು ಈಗ ನಮ್ಮ ಮುಖ್ಯಮಂತ್ರಿಗಳು. ಅವರು ಮುಖ್ಯಮಂತ್ರಿಯಾಗಿ, ನಾನು ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷನಾಗಿ ಇಬ್ಬರೂ ಒಟ್ಟಿಗೆ ಚುನಾವಣೆ ನಡೆಸುತ್ತೇವೆ. ಅವರ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ. ಅದರಲ್ಲಿ ಅನುಮಾನವಿಲ್ಲ. ಆಸೆ ಪಡುವುದು, ಜನರಿಗೆ ಶಕ್ತಿ ನೀಡುವಂತೆ ಕೇಳುವುದು ತಪ್ಪಲ್ಲ. ನಮ್ಮ ಭಾಗದಲ್ಲಿ ನಾನು ಕೂಡ ಶಕ್ತಿ ನೀಡುವಂತೆ ಜನರ ಬಳಿ ಕೇಳುತ್ತೇನೆ. ಅದನ್ನು ತಿರುಚುವ ಅಗತ್ಯವಿಲ್ಲ. ಯತೀಂದ್ರ ಬಹಳ ಜವಾಬ್ದಾರಿಯುತ ನಾಯಕ. ನಾವು ಅವರಿಗೆ ಪ್ರೋತ್ಸಾಹ ನೀಡುತ್ತೇವೆ ಎಂದರು.

ಶಿವಕುಮಾರ್ ಅವರಿಗೆ ಅಧಿಕಾರ ಸಿಗಬಾರದು ಎಂಬ ಅಧಿಕಾರ ಹಂಚಿಕೆ ಸೂತ್ರ ಕಾಂಗ್ರೆಸ್ ನಲ್ಲಿ ಆಗಿದೆ ಎಂಬ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, ಬಿಜೆಪಿಯವರು ಅವರ ಪಕ್ಷದ ವಿಚಾರ ಸರಿ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ಮೈಸೂರು ಸ್ಯಾಂಡಲ್ ನಕಲಿ ಸೋಪು ತಯಾರಕರ ಜತೆ ಬಿಜೆಪಿ ನಾಯಕರ ಒಡನಾಟದ ವಿಚಾರವಾಗಿ ಕೇಳಿದಾಗ, ನಕಲಿ ಮೈಸೂರು ಸ್ಯಾಂಡಲ್ ಸೋಪ್​​ಗಳನ್ನು ನಾನೂ ನೋಡಿದ್ದೇನೆ. ನೈಜ ಹಾಗೂ ನಕಲಿ ಎರಡೂ ಮಾದರಿಯ ಸಾಬೂನು ನೋಡಿದ್ದೇವೆ. ನಕಲಿ ಸೋಪುಗಳು ಒಂದು ದಿನದ ನಂತರ ಬಣ್ಣ ಕಳೆದುಕೊಳ್ಳುತ್ತವೆ. ಈ ಬಗ್ಗೆ ತನಿಖೆಯಾಗಬೇಕು ಎಂದು ನಾನು ಈಗಾಗಲೇ ಹೇಳಿದ್ದೆ. ಈ ಹಿಂದೆ ಮೈಸೂರು ಲ್ಯಾಂಪ್ಸ್​​ಗಳನ್ನು ನಕಲು ಮಾಡಲಾಗುತ್ತಿತ್ತು. ಈಗ ಮೈಸೂರ್ ಸ್ಯಾಂಡಲ್ ನಕಲಿ ಸೋಪು ಬಗ್ಗೆ ತನಿಖೆ ಮಾಡಿ ಒಳ್ಳೆಯ ಕೆಲಸ ಮಾಡಿದ್ದಾರೆ. ಇದರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಶಿವಕುಮಾರ್​ ತಿಳಿಸಿದರು.

ಹುಬ್ಬಳ್ಳಿಯಲ್ಲಿ 300 ಕೋಟಿ ಮೌಲ್ಯದ ರೈಲ್ವೆ ಭೂಮಿಯನ್ನು ಕೇವಲ 80 ಕೋಟಿಗೆ ಬಿಡ್ ಕರೆಯಲು ಮುಂದಾಗಿದ್ದು, ಇದರ ಹಿಂದೆ ಬಿಜೆಪಿ ನಾಯಕರ ಕೈವಾಡದ ಬಗ್ಗೆ ಕೇಳಿದಾಗ, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಮಾಹಿತಿ ಇಲ್ಲದೇ ನಾನು ಮಾತನಾಡುವುದಿಲ್ಲ. ಅನಗತ್ಯವಾಗಿ ಮಾತನಾಡುವುದಿಲ್ಲ ಎಂದರು.

ನಿಗಮ ಮಂಡಳಿ ಪಟ್ಟಿ ವಿಚಾರವಾಗಿ ಕೇಳಿದಾಗ, ನಿಗಮ ಮಂಡಳಿ ನೇಮಕ ಪಟ್ಟಿ ಶೀಘ್ರವೇ ಬಿಡುಗಡೆ ಮಾಡಲಾಗುವುದು. ಮುಖ್ಯಮಂತ್ರಿಗಳು ಹೇಳಿದಾಗ ನಿಮ್ಮ ಗಮನಕ್ಕೆ ತರುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: 'ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಸಿದ್ದರಾಮಯ್ಯ 5 ವರ್ಷ ಅಡೆತಡೆ ಇಲ್ಲದೇ ಸಿಎಂ'

ಹೊಳೆನರಸೀಪುರ ತಾಲೂಕಿನ ಅಣ್ಣೆಚಾಕನಹಳ್ಳಿಯಲ್ಲಿ ಮಂಗಳವಾರ ನಡೆದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿದರೆ ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ. ಇದರ ಜೊತೆಗೆ ತಂದೆಗೆ ನೈತಿಕ ಬಲ ಹೆಚ್ಚುತ್ತದೆ. ಯಾವುದೇ ಅಡೆತಡೆ ಇಲ್ಲದೇ ಅವರು ಮುಂದಿನ ಐದು ವರ್ಷ ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ ಎಂದು ಹೇಳಿದ್ದರು.

ABOUT THE AUTHOR

...view details