ಬೆಂಗಳೂರು: ಬೆಂಗಳೂರಿನ ಫುಟ್ಪಾತ್ ಮೇಲಿರುವ ಅಂಗಡಿಗಳನ್ನು ತೆರವುಗೊಳಿಸುವಂತೆ ಹೈಕೋರ್ಟ್ನ ಆದೇಶವಿದೆ. ಆದ್ದರಿಂದ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರು ನಗರ ರಸ್ತೆ ಸುರಕ್ಷತಾ ಸಮಿತಿ ಹಾಗೂ ಸಂಚಾರಿ ಪೊಲೀಸ್ ಇಲಾಖೆಯು ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದಲ್ಲಿ ಡಿಸಿಎಂ ಪಾಲ್ಗೊಂಡರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಯನಗರದ ಫುಟ್ಪಾತ್ ಮೇಲಿನ ಅಂಗಡಿಗಳ ತೆರವು ಕಾರ್ಯಾಚರಣೆಯ ವಿಚಾರವಾಗಿ ಪ್ರತಿಕ್ರಿಯಿಸಿದರು.
''ಬೆಂಗಳೂರಿನ ಫುಟ್ಪಾತ್ ಮೇಲಿರುವ ಅಂಗಡಿಗಳನ್ನ ತೆರವುಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿದೆ. ಆದರೂ, ಸಹ ಕೆಲವು ನಿಬಂಧನೆಗಳೊಂದಿಗೆ ಫುಟ್ಪಾತ್ ಮೇಲೆ ಬದಿಯಲ್ಲಿ ತಳ್ಳುವ ಗಾಡಿಗಳಲ್ಲಿ ತಾತ್ಕಾಲಿಕ ವ್ಯಾಪಾರ ಮಾಡುವವರಿಗೆ ಪ್ರೋತ್ಸಾಹ ಹಾಗೂ ಹಣದ ಸಹಾಯ ಸಹ ಮಾಡಲು ನಾವು ಸಿದ್ಧರಿದ್ದೇವೆ. ಆದರೆ, ಶಾಶ್ವತವಾಗಿ ಟೆಂಟ್ ಹಾಕಿಕೊಂಡು ವ್ಯಾಪಾರ ಮಾಡಿದರೆ, ಪಾದಚಾರಿಗಳು ಎಲ್ಲಿ ಓಡಾಡಬೇಕು'' ಎಂದು ಡಿಕೆಶಿ ಪ್ರಶ್ನಿಸಿದರು.
ಅಲ್ಲದೇ, ''ಫುಟ್ಪಾತ್ನಲ್ಲಿ ಅಂಗಡಿಗಳನ್ನು ಹಾಕಿಕೊಂಡು ವ್ಯಾಪಾರ ಮಾಡುವುದರಿಂದ ಸಾಕಷ್ಟು ತೊಂದರೆಗಳಾಗುತ್ತಿವೆ ಎಂದು ದೂರುಗಳು ಬಂದಿವೆ. ಇದರ ನಂತರ ಹೈಕೋರ್ಟ್ನಿಂದ ಆದೇಶ ಕೂಡಾ ಬಂದಿದೆ. ಆದ್ದರಿಂದ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ. ಈ ವಿಚಾರವಾಗಿಯೇ ನನ್ನ ಬಳಿ ಕೂಡಾ ಎರಡ್ಮೂರು ಬಾರಿ ದೂರುಗಳು ಬಂದಿದ್ದವು. ನಾನೂ ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ'' ಎಂದು ಅವರು ತಿಳಿಸಿದರು.