ಬೆಂಗಳೂರು : 2020 - 21 ನೇ ಸಾಲಿನ ಎಸ್‍ಸಿಪಿ ಮತ್ತು ಟಿಎಸ್‍ಪಿ ಉಪಯೋಜನೆಯಡಿ ಎಲ್ಲ ಇಲಾಖೆಗಳು ಕ್ರಿಯಾ ಯೋಜನೆಯನ್ನು ಸಿದ್ದಪಡಿಸಿ ಮೇ. 20ರೊಳಗೆ, ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಸಚಿವರಾದ ಹಾಗೂ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರು ಸೂಚಿಸಿದ್ದಾರೆ.
ವಿಕಾಸಸೌಧದಲ್ಲಿ ಇಂದು 2020-21 ನೇ ಸಾಲಿನ ಎಸ್‍ಸಿಪಿ ಮತ್ತು ಎಸ್‍ಟಿಪಿ ಕ್ರಿಯಾ ಯೋಜನೆಯ ಕುರಿತು ನೊಡೆಲ್ ಏಜೆನ್ಸಿ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಶೀಘ್ರದಲ್ಲೇ ನಡೆಯಲಿರುವ ಪರಿಶಿಷ್ಟ ಜಾತಿ, ಪಂಗಡ , ಗಿರಿಜನ ಉಪಯೋಜನೆ ಕುರಿತ ರಾಜ್ಯ ಪರಿಷತ್ ಸಭೆಯಲ್ಲಿ ಈ ಕ್ರಿಯಾ ಯೋಜನೆಯನ್ನು ಮಂಡಿಸಿ, ಅನುಮೋದನೆ ಪಡೆಯಬೇಕಿದೆ. ಶಿಕ್ಷಣ, ಸ್ವಯಂ ಉದ್ಯೋಗ, ಕೌಶಲ್ಯ ಅಭಿವೃದ್ಧಿ ಹಾಗೂ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಪರಿಶಿಷ್ಟರಿಗೆ ಆಸ್ತಿಯಾಗಿ ರೂಪಾಂತರವಾಗುವ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸೂಚಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆಯುಷ್ಮಾನ್ ಭಾರತ ಯೋಜನೆಯಡಿ 200 ಕೋಟಿ ರೂ. ಖರ್ಚು ಮಾಡುತ್ತಿದೆ. ಆದರೆ, ಪರಿಶಿಷ್ಟ ಜಾತಿ ಮತ್ತು ವರ್ಗದ ಫಲಾನುಭವಿಗಳಿಗೆ ತಲುಪುತ್ತಿದೆಯೇ ಎನ್ನುವುದನ್ನು ಪರಿಶೀಲಿಸಿ ತಲುಪುವಂತೆ ಮಾಡಬೇಕು. ಈ ಯೋಜನೆಯಡಿ ನಿರ್ಮಿಸಲಿರುವ ಆಸ್ಪತ್ರೆ ಕಟ್ಟಡಗಳು ಪರಿಶಿಷ್ಟ ಜಾತಿ ಮತ್ತು ವರ್ಗ ಸಮುದಾಯವು ಹೆಚ್ವಿನ ಸಂಖ್ಯೆಯಲ್ಲಿರುವ ಪ್ರದೇಶದಲ್ಲಿ ನಿರ್ಮಿಸಬೇಕು. ಶುಚಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಈ ಅನುದಾನವನ್ನು ಅದೇ ಸಮುದಾಯದ ಏಳಿಗೆಗೆ ಉಪಯೋಗಿಸಬೇಕು. ಕಳೆದ ವರ್ಷ ಅಪೂರ್ಣಗೊಂಡ ಮನೆಗಳನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಿದರು.