ಬೆಂಗಳೂರು: ಕಾರ್ಮಿಕರ ಸಂಘಟನೆಗಳು ಕರೆ ನೀಡಿರುವ ಅಖಿಲ ಭಾರತ್ ಮುಷ್ಕರ ಬೆಂಬಲಿಸಿ ನಾಳೆ ಕೆಲಸಕ್ಕೆ ಗೈರಾದರೆ ಅಂತಹವರ ವೇತನವನ್ನು ಕಡಿತಗೊಳಿಸಿ, ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ನಿಗಮದ ಅಧಕಾರಿಗಳು ಹಾಗೂ ಸಿಬ್ಬಂದಿಗೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಎಚ್ಚರಿಕೆ ರವಾನಿಸಿದ್ದಾರೆ.
ನಮ್ಮ ಸಾರಿಗೆ ನಿಗಮಗಳನ್ನು ಸರ್ಕಾರವು ಸಾರ್ವಜನಿಕ ಅಗತ್ಯ ಸೇವಾ ಸಂಸ್ಥೆ ಎಂದು ಘೋಷಿಸಿದ್ದು, ಆ ಪ್ರಕಾರ ಸಮರ್ಪಕವಾದ ಸಾರಿಗೆ ಸೌಲಭ್ಯವನ್ನು ಒದಗಿಸುವುದು ಪ್ರತಿವೋರ್ವ ಅಧಿಕಾರಿ ಹಾಗೂ ನೌಕರರ ಆದ್ಯ ಕರ್ತವ್ಯವಾಗಿದೆ. ಇದನ್ನು ಉಲ್ಲಂಘಿಸಿ ಕೆಲಸಕ್ಕೆ ಗೈರು ಹಾಜರಾದರೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ನಾಳೆ ಮುಷ್ಕರ ನಡೆಸುವುದಾಗಿ ತಿಳಿಸಿರುವುದು ನೋವಿನ ಸಂಗತಿಯಾಗಿದೆ. ಈ ಸಂದರ್ಭದಲ್ಲಿ ನಮ್ಮ ಸಾರಿಗೆ ವ್ಯವಸ್ಥೆಯ ಬಹುಮುಖ್ಯ ಅಂಗವಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬೃಹತ್ ಬೆಂಗಳೂರು ಮಹಾನಗರ ಸಾರಿಗೆ ನಿಗಮಗಳ ಬಸ್ಗಳು ಎಂದಿನಂತೆ ಕಾರ್ಯ ನಿರ್ವಹಿಸಬೇಕೆಂದು ಈಗಾಗಲೇ ಸೂಚಿಸಿ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಡಿಸಿಎಂ ಲಕ್ಷ್ಮಣ ಸವದಿ ಸಂದೇಶ ಸಾರ್ವಜನಿಕರಿಗೆ ಅಗತ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಮುಷ್ಕರದಲ್ಲಿ ಭಾಗವಹಿಸುವ ಯಾರೊಬ್ಬರೂ ಸರ್ಕಾರಿ ಆಸ್ತಿ- ಪಾಸ್ತಿಗಳಿಗೆ ಅದರಲ್ಲೂ ವಿಶೇಷವಾಗಿ ಸಾರಿಗೆ ಬಸ್ಗಳಿಗೆ ಹಾನಿ ಉಂಟುಮಾಡುವ ದುಷ್ಕೃತ್ಯಕ್ಕೆ ಮುಂದಾಗಬಾರದು. ಒಂದು ವೇಳೆ ಕಾನೂನು ಉಲ್ಲಂಘಿಸಿ ಅಹಿತಕರ ಘಟನೆಗಳಿಗೆ ಯತ್ನಿಸಿದ್ದಲ್ಲಿ, ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ನಮ್ಮ ಸರ್ಕಾರ ಹಿಂದೆ ಮುಂದೆ ನೋಡುವುದಿಲ್ಲ ಎಂದು ಖಡಕ್ ಸಂದೇಶ ನೀಡಿದ್ದಾರೆ.
ಈ ರೀತಿಯ ಮುಷ್ಕರಗಳಿಂದಾಗಿ ನಮ್ಮ ಸರ್ಕಾರಿ ಸಂಸ್ಥೆಗಳಿಗೆ ನಷ್ಟವಾಗುವುದಲ್ಲದೇ, ರಾಷ್ಟ್ರದ ಆರ್ಥಿಕ ಚಟುವಟಿಕೆಗಳು ಅಧೋಗತಿಗೆ ತಲುಪುವಂತಾಗುತ್ತದೆ. ಈ ಹಿನ್ನೆಲೆಯಲ್ಲಿ ನಮ್ಮ ಕೆಎಸ್ಆರ್ಟಿಸಿ, ಬಿಎಂಟಿಸಿ ಸಂಸ್ಥೆಯ ಸಿಬ್ಬಂದಿ ಈ ಬಂದ್ನಲ್ಲಿ ಭಾಗವಹಿಸಬಾರದು. ಮತ್ತು ಈ ಸಂಸ್ಥೆಗಳ ದಿನನಿತ್ಯದ ಕೆಲಸ ಕಾರ್ಯಗಳಿಗೆ ಅಡ್ಡಿಪಡಿಸಬಾರದು ಎಂದು ನಾನು ಅತ್ಯಂತ ಕಳಕಳಿಯಿಂದ ವಿನಂತಿಸುತ್ತೇನೆ ಎಂದು ಪತ್ರಿಕಾ ಹೇಳಿಕೆ ಮೂಲಕ ಮನವಿ ಮಾಡಿದ್ದಾರೆ.