ಬೆಂಗಳೂರು: ಆಸ್ತಿ ತೆರಿಗೆ ಪಾವತಿ ಕುರಿತ ನೋಟಿಸ್, ದುಬಾರಿ ದಂಡದ ವಿಚಾರವಾಗಿ ಅನೇಕ ದೂರುಗಳು ವ್ಯಕ್ತವಾಗುತ್ತಿದ್ದು, 30" x 40" ಅಳತೆಯ ನಿವೇಶನ, ಶೆಡ್ ಹೊಂದಿರುವವರಿಗೆ ಆಸ್ತಿ ತೆರಿಗೆ ವಿನಾಯಿತಿ ಹಾಗೂ ದಂಡ ಕಡಿಮೆ ಮಾಡುವ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಗಾಂಧಿನಗರದ ಶಿರೂರ್ ಉದ್ಯಾನದಲ್ಲಿ ಮಂಗಳವಾರ ನಡೆದ "ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ" ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಆಸ್ತಿ ತೆರಿಗೆ ವಿಚಾರದಲ್ಲಿ ಸಮಸ್ಯೆ ಆಗಿದೆ ಎಂಬ ಅನೇಕ ದೂರುಗಳು ಬಂದಿವೆ. ಕಾಲಮಿತಿಯೊಳಗೆ ತೆರಿಗೆ ಪಾವತಿಸಿ ಎಂದು ನೋಟಿಸ್ ಬಂದಿರುವುದರ ಬಗ್ಗೆ ಗಾಬರಿಯಾಗಬೇಡಿ. ದಂಡವನ್ನು ಎಷ್ಟು ಸಾಧ್ಯವೋ ಅಷ್ಟು ಕಡಿಮೆ ಮಾಡುತ್ತೇವೆ. ಈ ಕಾರ್ಯಕ್ರಮ ನಡೆದ ಎಲ್ಲಾ ಕ್ಷೇತ್ರಗಳಲ್ಲೂ ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.
2020ರಲ್ಲಿ ಜಾರಿಗೆ ಬಂದ ಆಸ್ತಿ ತೆರಿಗೆ ಕುರಿತ ಕಾಯ್ದೆಯಿಂದಾಗಿ ಜನರಿಗೆ ದುಬಾರಿ ದಂಡ ವಿಧಿಸಲಾಗುತ್ತಿದೆ. ಈಗ ಆ ಕಾನೂನಿಗೆ ತಿದ್ದುಪಡಿ ತರಬೇಕಿದೆ. ಕೆಲ ದಿನಗಳಲ್ಲಿ ಈ ತಿದ್ದುಪಡಿ ಬಗ್ಗೆ ಮಾಹಿತಿ ನೀಡಲಾಗುವುದು. ನಮ್ಮ ಸರ್ಕಾರವೇ ಸಮೀಕ್ಷೆ ಮಾಡಿಸಿ, ನಿಮ್ಮ ಮನೆ ಬಾಗಿಲಿಗೇ ನಿಮ್ಮ ಸ್ವತ್ತಿನ ದಾಖಲೆಗಳನ್ನು ಉಚಿತವಾಗಿ ತಂದು ಕೊಡಲಾಗುವುದು. ಆಸ್ತಿ ತೆರಿಗೆ ಪಾವತಿ ಬಗ್ಗೆ ಜನರ ಮೇಲೆ ಒತ್ತಡ ಹೇರಬೇಡಿ ಎಂದು ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಯಾರು ಎಷ್ಟು ತೆರಿಗೆ ಕಟ್ಟುತ್ತಿದ್ದಾರೋ, ಅವರಿಂದ ಅಷ್ಟು ಕಟ್ಟಿಸಿಕೊಳ್ಳಿ. ಯಾರಾದರೂ ಹೆಚ್ಚುವರಿ ತೆರಿಗೆ ಪಾವತಿ ಮಾಡಿದ್ದರೆ ಮುಂದಿನ ವರ್ಷ ಅದನ್ನು ಸರಿದೂಗಿಸಲು ಸೂಚಿಸಿದ್ದೇನೆ ಎಂದು ತಿಳಿಸಿದರು.
ತಳ್ಳುವ ಗಾಡಿಯಲ್ಲಿ ಮಾತ್ರ ಬೀದಿ ವ್ಯಾಪಾರಕ್ಕೆ ಅವಕಾಶ:ಶಾಸಕ ಅಶ್ವತ್ ನಾರಾಯಣ ಅವರು ಆಸ್ತಿ ತೆರಿಗೆ ಮತ್ತು ಪಾದಚಾರಿ ಮಾರ್ಗ ವಿಚಾರವಾಗಿ ಗಮನ ಸೆಳೆದರು. ಈ ವಿಚಾರವಾಗಿ ಹೈಕೋರ್ಟ್ ಆದೇಶ ಕೂಡ ಬಂದಿದೆ. ಆ ಆದೇಶ ಪಾಲನೆ ಆಗದಿದ್ದರೆ ಪಾಲಿಕೆ ಆಯುಕ್ತರು ಜೈಲಿಗೆ ಹೋಗಬೇಕಾಗುತ್ತದೆ ಎಂದರು. ಬೀದಿಬದಿ ವ್ಯಾಪಾರಿಗಳು ವ್ಯಾಪಾರ ಮಾಡಬಾರದು ಎಂದು ಹೇಳುವುದಿಲ್ಲ. ನೀವು ನೋಂದಣಿ ಮಾಡಿಸಿಕೊಂಡು, ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡಬೇಕು. ಪಾದಚಾರಿ ಮಾರ್ಗದಲ್ಲಿ ಅಂಗಡಿ ಹಾಕಿಕೊಂಡರೆ ಜನ ಸಾಮಾನ್ಯರು ಎಲ್ಲಿ ಓಡಾಡಬೇಕು? ಎಂದು ಪ್ರಶ್ನಿಸಿದರು.