ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ ವ್ಯಾಪ್ತಿಯಲ್ಲಿ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ಪ್ರಮಾಣವನ್ನು ಕಾಯ್ದಿರಿಸಿ, ಬೆಳೆದು ನಿಂತಿರುವ ಮೆಣಸಿನಕಾಯಿ ಬೆಳೆಗಳ ಸಂರಕ್ಷಣೆಗೆ ಕೂಡಲೇ 2.75 ಟಿಎಂಸಿ ನೀರನ್ನು ಕಾಲುವೆಗಳಿಗೆ ಹರಿಸಲು ತೀರ್ಮಾನಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.
ಸದಾಶಿವನಗರದ ತಮ್ಮ ನಿವಾಸದಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರೈತರನ್ನು ಗಮನದಲ್ಲಿಟ್ಟುಕೊಂಡು ನೀರು ಬಿಡಲು ತೀರ್ಮಾನ ಮಾಡಲಾಗಿದೆ. ಕಷ್ಟದ ಪರಿಸ್ಥಿತಿಯಲ್ಲಿ ರೈತರ ಸಹಕಾರ ಮುಖ್ಯ. 170 ಕೀ.ಮೀ. ವ್ಯಾಪ್ತಿಯಲ್ಲಿ ನೀರು ಹರಿಯಬೇಕಿದೆ. ರೈತರ ಹೋರಾಟ, ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದು 2.75 ಟಿಎಂಸಿ ನೀರು ಬಿಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಜನಪ್ರತಿನಿಧಿಗಳು, ರೈತ ಪರ ಹೋರಾಟಗಾರರು ಮಾನಿಟರ್ ಮಾಡಬೇಕು. ನೀವೇ ಪೊಲೀಸ್ ಆಗಬೇಕು, ರಕ್ಷಣೆ ಮಾಡಬೇಕು ಎಂದು ಮನವಿ ಮಾಡಿದರು.
ಕುಡಿಯುವ ನೀರಿಗೂ ಸಮಸ್ಯೆ:ಈ ಬಗ್ಗೆ ಶನಿವಾರ, ಕೃಷ್ಣಾ ಮೇಲ್ದಂಡೆ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಸಚಿವರುಗಳು, ಶಾಸಕರುಗಳು, ಜಿಲ್ಲಾಧಿಕಾರಿಗಳು ಹಾಗೂ ರೈತ ಮುಖಂಡರುಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಗಿದೆ. ಅಲ್ಲಿ ಬರಗಾಲ ಇದ್ದರೂ ರೈತರು ಬೆಳೆ ಬೆಳೆದಿದ್ದಾರೆ. ಆ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಇದೆ. ರೈತರು ಗುಂಡಿ ತೆಗೆದು, ಜೆಸಿಬಿಯಿಂದ ಮುಚ್ಚಿ ಎಂದು ಪ್ರತಿಭಟನೆ ಮಾಡಿದ್ದಾರೆ. ಸರ್ಕಾರ ಯಾರನ್ನೂ ಮುಚ್ಚಲು ಹೋಗಲ್ಲ. ಜೂನ್ವರೆಗೆ ಮಳೆ ನಿರೀಕ್ಷೆ ಕಷ್ಟ. ನೀರು ಬಿಟ್ಟರೂ ಕೊನೆಯ ಭಾಗದವರೆಗೂ ತಲುಪಲ್ಲ ಎಂದು ಹೇಳಿದರು.