ಬೆಂಗಳೂರು: ರಾಜ್ಯದಲ್ಲಿ ದೀಪಾವಳಿ ಹಬ್ಬವನ್ನು ಆಚರಿಸುವ ಸಮಯದಲ್ಲಿ ವಿವಿಧ ರೀತಿಯ ಪಟಾಕಿಗಳನ್ನು ಸ್ಫೋಟಿಸುವುದರಿಂದ ಉಂಟಾಗುವ ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯದಿಂದ ಸಾರ್ವಜನಿಕ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟಾಗುವುದನ್ನು ತಡೆಗಟ್ಟಲು ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.
ಪೌರಾಡಳಿತ ನಿರ್ದೇಶನಾಲಯ ಈ ನಿಟ್ಟಿನಲ್ಲಿ ರಾಜ್ಯದ ಎಲ್ಲ ಮಹಾನಗರಪಾಲಿಕೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಶಬ್ದ ಮತ್ತು ವಾಯು ಮಾಲಿನ್ಯ ನಿಯಂತ್ರಿಸಲು ಸುಪ್ರೀಂ ಕೋರ್ಟ್ ಆದೇಶದನ್ವಯ ರಾಜ್ಯದ ಎಲ್ಲ ಮಹಾನಗರಪಾಲಿಕೆಗಳು, ಸ್ಥಳೀಯ ಸಂಸ್ಥೆಗಳು ಮುನ್ನೆಚ್ಚರಿಕಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಸೂಚಿಸಿದೆ.
ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಜಿಲ್ಲಾ ಅಗ್ನಿಶಾಮಕ ಪಡೆ ಅಧಿಕಾರಿ, ಸ್ಥಳೀಯ ಸಂಸ್ಥೆಯ ಮುಖ್ಯಸ್ಥರುಗಳು, ಆರೋಗ್ಯಧಿಕಾರಿಗಳು, ತಹಶೀಲ್ದಾರರು, ಜಿಲ್ಲಾ ಪರಿಸರ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಆಸಕ್ತ ನಾಗರಿಕರು ಹಾಗು ಸ್ಥಳೀಯ ಸರ್ಕಾರೇತರ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡ ಕಾರ್ಯಪಡೆಗಳನ್ನು ರಚಿಸಿ, ತಮ್ಮ ವ್ಯಾಪ್ತಿಯಲ್ಲಿನ ಎಲ್ಲ ಪಟಾಕಿ ಮಾರಾಟಗಾರರ ಗೋದಾಮುಗಳನ್ನು ಪರಿಶೀಲಿಸಬೇಕು. ಹಾಗೂ ಅಲ್ಲಿ ಹಸಿರು ಪಟಾಕಿಯಲ್ಲದ, ಇನ್ನಾವುದಾದರೂ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡಿದ್ದಲ್ಲಿ, ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಹಾಗೂ ಸಂಬಂಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದು ತಿಳಿಸಿದೆ.
ಎಲ್ಲ ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿನ್ನೆಯಿರುತ್ತದೆ ಹಾಗು ಕ್ಯೂಆರ್ ಕೋಡ್ ಸಹಾ ಇರುತ್ತದೆ, ಸದರಿ ಚಿಹ್ನೆಯ ಬಗ್ಗೆ ಸಂಬಂಧಪಟ್ಟ ಜಿಲ್ಲೆಯ ಪರಿಸರ ಅಧಿಕಾರಿಗಳಿಂದ ಖಚಿತ ಪಡಿಸಿಕೊಳ್ಳುವುದು, ಸದರಿ ಚಿಹ್ನೆ ಇಲ್ಲದ ಯಾವುದೇ ಪಟಾಕಿ ಹಸಿರು ಪಟಾಕಿಯೆನಿಸುವುದಿಲ್ಲ, ಮತ್ತು ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಸೂಚಿಸಿದೆ.