ಬೆಂಗಳೂರು : ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಎಂಬಿಬಿಎಸ್ ಅಂತಿಮ ವರ್ಷದ 151 ವಿದ್ಯಾರ್ಥಿಗಳು ಮೂರು ತಿಂಗಳು ಮಾಡಿರುವ ಸೇವೆಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಬೆಂಗಳೂರಿನ ಎನ್.ಲಕ್ಮ್ಷೀ ಅವಿನಾಶ್ ಸೇರಿದಂತೆ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.
ತುಮಕೂರಿನ ಎಲ್.ವಿಕಾಸ್ ಮತ್ತು ಚಿತ್ರದುರ್ಗದ ಎಂ. ಅಜಯ್ ಅವರು ತಮ್ಮನ್ನೂ ಒಳಗೊಂಡು ಶಿವಮೊಗ್ಗದ ವೈದ್ಯಕೀಯ ವಿಜ್ಞಾನ ಸಂಸ್ಥೆಯ 151 ವಿದ್ಯಾರ್ಥಿಗಳಿಗೆ 2021ರ ಮೇ-ಜುಲೈ ಅವಧಿಯಲ್ಲಿ ತಲಾ 20 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲು ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯಕ್ಕೆ ನಿರ್ದೇಶಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು.
ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಾನವ ಸಂಪನ್ಮೂಲ ಬಳಕೆ ಮಾಡಿಕೊಳ್ಳುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2021ರ ಮೇ 3ರಂದು ಆದೇಶಿಸಿತ್ತು. ಅದಕ್ಕೆ ಪ್ರತಿಯಾಗಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಬೇಕು ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವು 2021ರ ಮಾರ್ಚ್ 20ರಂದು ಸರ್ಕಾರಿ ವೈದ್ಯಕೀಯ ಸಂಸ್ಥೆಗಳು ಮತ್ತು ದಂತ ವಿಜ್ಞಾನ ಸಂಸ್ಥೆಗಳಿಗೆ ಪತ್ರ ಬರೆದು ಪದವಿ ಮತ್ತು ಸ್ನಾತಕೋತ್ತರ ಎಂಬಿಬಿಎಸ್ ವಿದ್ಯಾರ್ಥಿಗಳ ಸೇವೆಯನ್ನು ಕೊರೋನಾ ಎರಡನೇ ಅಲೆ ತಡೆಯಲು ಬಳಕೆ ಮಾಡಿಕೊಳ್ಳಬಹುದು ಎಂದು ಹೇಳಿತ್ತು.