ಬೆಂಗಳೂರು: ವಕೀಲರ ಸಂಘದ ಅಧ್ಯಕ್ಷರಾದ ವಿವೇಕ್ ರೆಡ್ಡಿ ನೇತೃತ್ವದ ನಿಯೋಗ ಇಂದು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಹಲವು ಮಹತ್ವದ ಸಂಗತಿಗಳ ಕುರಿತಂತೆ ಚರ್ಚಿಸಿ ಮನವಿ ಪತ್ರ ಸಲ್ಲಿಸಿತು. ಮುಖ್ಯಮಂತ್ರಿಗಳ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿದ ನಿಯೋಗವು ಸುದೀರ್ಘ ಸಮಾಲೋಚನೆ ನಡೆಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಸಿದ್ಧಪಡಿಸುವ ಕಾರ್ಯದಲ್ಲಿ ನಿರತರಾಗಿದ್ದು, ವಕೀಲರು ಎದುರಿಸುತ್ತಿರುವ ಹಲವು ಸಮಸ್ಯೆಗಳ ಪರಿಹಾರಕ್ಕೆ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ವಿಶೇಷ ಅನುದಾನಗಳನ್ನು ಬಿಡುಗಡೆ ಮಾಡುವಂತೆ ಕೋರಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ನಿಟ್ಟಿನಲ್ಲಿ ಗಂಭೀರ ಚಿಂತನೆ ನಡೆಸುವ ಭರವಸೆ ಕೊಟ್ಟಿದ್ದಾರೆ.
ಸರ್ಕಾರಿ ನೌಕರರ ಸಂಘ ಭೇಟಿ :ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಷಡಾಕ್ಷರಿ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿತು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಸರ್ಕಾರಿ ನೌಕರರ ಸಂಘದ ಪ್ರಮುಖರು ಭೇಟಿ ನೀಡಿದ್ದು ಅಭಿನಂದನೆ ಸಲ್ಲಿಸುವ ಜೊತೆಗೆ ಹಲವು ಬೇಡಿಕೆಗಳನ್ನು ಸಹ ಮುಂದಿಟ್ಟಿದ್ದಾರೆ.
ನಿವೃತ್ತ ನೌಕರರು ಹಾಗೂ ಕುಟುಂಬ ಪಿಂಚಣಿದಾರರಿಗೆ ಜ್ಯೋತಿ ಸಂಜೀವಿನಿ ಯೋಜನೆಯಡಿ ಸೌಲಭ್ಯ, ಬಸ್ ಪ್ರಯಾಣದಲ್ಲಿ ರಿಯಾಯಿತಿ ನೀಡುವುದು ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಬೇಕು. ಇಲ್ಲವಾದರೆ ಆಯುಷ್ಮಾನ್ ಭಾರತ ಆರೋಗ್ಯ ಯೋಜನೆಯಡಿ ನಗದು ರಹಿತ ಆರೋಗ್ಯ ಸೇವೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.