ಬೆಂಗಳೂರು:ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವು ತೀವ್ರಗೊಂಡು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದ್ದು, ರಾಜ್ಯದಲ್ಲಿ ನಾಲ್ಕು ದಿನಗಳ ಕಾಲ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಮೇಲೆ ಇದರ ಪರಿಣಾಮ ಹೆಚ್ಚಾಗಿ ಇರದಿದ್ದರೂ ಬಹುತೇಕ ಕಡೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಆಗಾಗ್ಗೆ ತಂಪಾದ ಮೇಲ್ಮೈ ಗಾಳಿ ಬೀಸಲಿದೆ. ಕೆಲವೆಡೆ ಚದುರಿದಂತೆ ಅಲ್ಲಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆಯಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಬಂಗಾಲಕೊಲ್ಲಿ ದಕ್ಷಿಣ ಭಾಗದಲ್ಲಿ ಉಂಟಾಗಿದ್ದ ಲಘು ವಾಯುಭಾರ ಕುಸಿತವು ತೀವ್ರವಾಗಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳಲಿದೆ. ಇದರಿಂದ ತಮಿಳುನಾಡು ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಪೂರ್ವ ಈಶಾನ್ಯದ ಕಡೆಗೆ ಚಂಡಮಾರುತವು ಚಲಿಸುವ ಸಾಧ್ಯತೆ ಇರುವುದರಿಂದ ರಾಜ್ಯದ ಮೇಲೆ ನೇರ ಪರಿಣಾಮವಾಗುವುದಿಲ್ಲ ಇಲಾಖೆ ಮಾಹಿತಿ ನೀಡಿದೆ.