ಕರ್ನಾಟಕ

karnataka

ETV Bharat / state

ಧರ್ಮಸ್ಥಳ, ಮಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ

ಧರ್ಮಸ್ಥಳದ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ಆಣೆಕಟ್ಟು ನಿರ್ಮಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ

By

Published : May 27, 2019, 11:03 PM IST

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಧರ್ಮಸ್ಥಳ ನೀರಿನ ಸಮಸ್ಯೆ ಒಳಗೊಂಡಂತೆ ದಕ್ಷಿಣ ಕನ್ನಡ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆ ನಡೆಸಿ ಚರ್ಚಿಸಿದರು.

ಧರ್ಮಸ್ಥಳದಲ್ಲಿ ನೇತ್ರಾವತಿ ನೀರು ಬತ್ತಿರುವುದರಿಂದ ಉಂಟಾಗಿರುವ ಸಮಸ್ಯೆ ಕುರಿತು ಮುಖ್ಯಮಂತ್ರಿ ಅವರ ಸೂಚನೆಯಂತೆ ಭೇಟಿ ನೀಡಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆರ್. ಸೆಲ್ವಮಣಿ ಸಮಸ್ಯೆ ಕುರಿತು ಮಾಹಿತಿ ನೀಡಿದರು.

ಅಲ್ಲದೆ ಡಾ. ವೀರೇಂದ್ರ ಹೆಗ್ಗಡೆಯವರು ಎರಡು ಕಿಂಡಿ ಅಣೆಕಟ್ಟು ನಿರ್ಮಿಸಲು ಸರ್ಕಾರಕ್ಕೆ ಮನವಿ ಮಾಡಿರುವ ಹಿನ್ನೆಲೆ, ಏಳು ಕೋಟಿ ರೂ. ವೆಚ್ಚದಲ್ಲಿ ನೆರಿಯ ಹೊಳೆಗೆ ಹಾಗೂ ನೇತ್ರಾವತಿ ನದಿಗೆ ಕಿಂಡಿ ಅಣೆಕಟ್ಟು ನಿರ್ಮಿಸಲು ಸರ್ಕಾರಕ್ಕೆ ಸಣ್ಣ ನೀರಾವರಿ ಇಲಾಖೆಯು ಪ್ರಸ್ತಾವನೆ ಸಲ್ಲಿಸಿದೆ ಎಂದು ತಿಳಿಸಿದರು. ಈ ಪ್ರಸ್ತಾವನೆಯನ್ನು ಅನುಮೋದಿಸಿ, ಕೂಡಲೇ ಕಿಂಡಿ ಅಣೆಕಟ್ಟು ನಿರ್ಮಿಸಲು ಕ್ರಮವಹಿಸಲು ಮುಖ್ಯಮಂತ್ರಿ ಸೂಚಿಸಿದರು.

ಮಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಕುರಿತು ಮಾಹಿತಿ ನೀಡಿದ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್, ಮಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಿದ್ದು, ತುಂಬೆ ಕಿಂಡಿ ಅಣೆಕಟ್ಟಿನಲ್ಲಿ 7 ಮೀಟರ್​​​ವರೆಗೆ ನೀರು ಸಂಗ್ರಹಿಸುವ ಅಗತ್ಯವಿದೆ. ಇದರಿಂದ ಹೆಚ್ಚುವರಿಯಾಗಿ 344 ಎಕರೆ ಭೂಮಿ ಜಲಾವೃತವಾಗಲಿದ್ದು, ಇದಕ್ಕಾಗಿ ಭೂಸ್ವಾಧೀನಕ್ಕೆ 130 ಕೋಟಿ ರೂ. ಗಳ ಅಗತ್ಯವಿದೆ ಎಂದು ತಿಳಿಸಿದರು.

ಈ ಬಗ್ಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು. ಇದಲ್ಲದೆ ಎಂಆರ್ ಪಿಎಲ್ ನಲ್ಲಿ ಸ್ಥಾಪಿಸಲಾಗುತ್ತಿರುವ ಉಪ್ಪುನೀರನ್ನು ಶುದ್ಧೀಕರಿಸುವ ಘಟಕದ ಸಾಧಕ ಬಾಧಕಗಳನ್ನು ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ಸೂಚಿಸಿದರು.

ಕಡಲ್ಕೊರೆತದಲ್ಲಿ‌ ಮನೆ ಕಳಕೊಂಡವರಿಗೆ ಪುನರ್ವಸತಿ

ಉಳ್ಳಾಲ ಭಾಗದಲ್ಲಿ ಕಡಲ್ಕೊರೆತದಿಂದ ಬಾಧಿತರಾಗುವ 150 ಮನೆಗಳನ್ನು ಗುರುತಿಸಲಾಗಿದ್ದು, ಇವರಿಗೆ ಕೊಡಗು ಮಾದರಿಯಲ್ಲಿ ಪುನರ್ವಸತಿ ಕಲ್ಪಿಸಲು ಸಿಎಂ ಸೂಚಿಸಿದರು. ಉಳ್ಳಾಲದಲ್ಲಿ ಪ್ರತಿವರ್ಷ ಕಡಲ್ಕೊರೆತ ತಡೆಯಲು ಸಮುದ್ರ ತೀರದಲ್ಲಿ ಕಲ್ಲು ಹಾಕಲು ಕೋಟ್ಯಂತರ ರೂಪಾಯಿ ವ್ಯಯಿಸಲಾಗುತ್ತಿದ್ದು, ಕಲ್ಲುಗಳು ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗುತ್ತವೆ.

ಇದಕ್ಕೆ ಶಾಶ್ವತ ಪರಿಹಾರ ಒದಗಿಸುವ ಅಗತ್ಯವಿದೆ ಎಂದು ಸಚಿವ ಯು.ಟಿ. ಖಾದರ್ ಅವರು ಮುಖ್ಯಮಂತ್ರಿ ಅವರ ಗಮನಕ್ಕೆ ತಂದರು. ಈ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ಈ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವಂತೆ ಕ್ರಮ ಕೈಗೊಳ್ಳಲು ಆದೇಶಿಸಿದರು.

ಸಭೆಯಲ್ಲಿ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ಮುಖ್ಯಮಂತ್ರಿಯವರ ಅಪರಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಎ.ಬಿ. ಇಬ್ರಾಹಿಂ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಜಯರಾಮ್, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.

ABOUT THE AUTHOR

...view details