ಬೆಂಗಳೂರು :ವಿಪತ್ತು ನಿರ್ವಹಣಾ ಕಾಯ್ದೆ-2005ರ ಅನ್ವಯ ‘ಜಿಲ್ಲಾ ವಿಪತ್ತು ಸ್ಪಂದನಾ ನಿಧಿ’ (ಡಿಡಿಆರ್‌ಎಫ್) ಸ್ಥಾಪಿಸಿ ಆದೇಶ ಹೊರಡಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಈ ಕುರಿತು ಹೈಕೋರ್ಟ್ ಕಾನೂನು ಸೇವಾ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ಈ ಮಾಹಿತಿ ನೀಡಿದರು.
ವಿಚಾರಣೆ ವೇಳೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರ ಪ್ರಮಾಣ ಪತ್ರವನ್ನು ಸರ್ಕಾರದ ಪರ ವಕೀಲರು ಪೀಠಕ್ಕೆ ಸಲ್ಲಿಸಿ, ವಿಪತ್ತು ನಿರ್ವಹಣಾ ಕಾಯ್ದೆ-2005ರ ಪ್ರಕಾರ ಜಿಲ್ಲಾ ವಿಪತ್ತು ಸ್ಪಂದನಾ ನಿಧಿ ಸ್ಥಾಪಿಸಿ ಫೆ.3ರಂದು ಆದೇಶ ಹೊರಡಿಸಲಾಗಿದೆ.
ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿರುವ ಹಣವನ್ನು ಜಿಲ್ಲಾ ವಿಪತ್ತು ಸ್ಪಂದನಾ ನಿಧಿಯೆಂದು ಹೆಸರಿಸಲಾಗಿದೆ ಎಂದು ವಿವರಿಸಿದರು. ಜಿಲ್ಲಾಧಿಕಾರಿಗಳ ಪಿಡಿ ಖಾತೆಯ ಹಣವನ್ನು ಜಿಲ್ಲಾ ವಿಪತ್ತು ಸ್ಪಂದನಾ ನಿಧಿಯನ್ನಾಗಿ ಮಾಡಿರುವುದಕ್ಕೆ ಅರ್ಜಿದಾರರ ಪರ ವಕೀಲರು ಆಕ್ಷೇಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಜಿಲ್ಲಾಧಿಕಾರಿಗಳ ಪಿಡಿ ಖಾತೆಯ ಹಣವನ್ನು ಜಿಲ್ಲಾ ವಿಪತ್ತು ಸ್ಪಂದನಾ ನಿಧಿಯನ್ನಾಗಿ ಬಳಸಿಕೊಳ್ಳಲು ಅವಕಾಶವಿದೆಯೇ ಎಂಬ ಬಗ್ಗೆ ವಿವರಣೆ ನೀಡುವಂತೆ ಸರ್ಕಾರಿ ವಕೀಲರಿಗೆ ಸೂಚಿಸಿತು.
ಅಲ್ಲದೇ ವಿಪತ್ತು ನಿರ್ವಹಣಾ ಕಾಯ್ದೆ-2005 ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಕಾಲ ಕಾಲಕ್ಕೆ ನೀಡಿರುವ ನಿರ್ದೇಶನಗಳನ್ನು ಪಾಲಿಸಿದ್ದರ ಬಗ್ಗೆ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಮಾ.1ಕ್ಕೆ ಮುಂದೂಡಿತು.