ಬೆಂಗಳೂರು: ವಿಶ್ವ ಪಾರಂಪರಿಕ ತಾಣವಾದ ಹಂಪಿಯ ಸುತ್ತಮುತ್ತಲಿನ ಗ್ರಾಮಗಳ ಕುರಿತು ನ್ಯಾಯಾಲಯ ಆದೇಶ ನೀಡಿರುವಂತೆ ಹೋಮ್ ಸ್ಟೇಗಳನ್ನು ತಕ್ಷಣಕ್ಕೆ ನಿಲ್ಲಿಸಬೇಕು. ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ಮುಂದಿನ ಕ್ರಮಕ್ಕೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರದ ವ್ಯಾಪ್ತಿಯ ಗ್ರಾಮಗಳ ಸಮಸ್ಯೆಗಳ ಕುರಿತಂತೆ ಚರ್ಚಿಸಲು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರ ನೇತೃತ್ವದ ನಿಯೋಗವು ಇಂದು ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ, ವಿಶ್ವ ಪಾರಂಪರಿಕ ತಾಣವಾದ ಹಂಪಿಯಲ್ಲಿ ಮಾದಕ ವಸ್ತುಗಳ ಬಳಕೆ, ವೇಶ್ಯಾವಾಟಿಕೆಗಳಂಥ ಕಾನೂನು ಬಾಹಿರ ಚಟುವಟಿಕೆಗಳನ್ನು ಗುರುತಿಸುವಂತೆ ನ್ಯಾಯಾಲಯ ಸೂಚಿಸಿದೆ. ಇದನ್ನು ಗುರುತಿಸಿ ನಿಲ್ಲಿಸುವ ಕೆಲಸವಾಗಬೇಕು. ಗ್ರಾಮಸ್ಥರಿಗೆ ವಿದ್ಯುತ್ ಮುಂತಾದ ಮೂಲಭೂತ ಸೌಕರ್ಯಗಳನ್ನು ಸ್ಥಗಿತಗೊಳಿಸಬಾರದು ಎಂದು ಅವರು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಂಪಿ ಪ್ರದೇಶದ 29 ಗ್ರಾಮಗಳಲ್ಲಿ 10 ಸಾವಿರ ಜನರಿದ್ದಾರೆ. 2009ರಲ್ಲಿ ನಾಲ್ಕು ಸ್ವಾಮೀಜಿಗಳು ದಾವೆ ಹೂಡಿದ್ದು, ಅನಧಿಕೃತ ಚಟುವಟಿಕೆಗಳನ್ನು ಗುರುತಿಸುವ ಕೆಲಸ ಪ್ರಾಧಿಕಾರದ್ದು ಎಂದು ನ್ಯಾಯಾಲಯ ತೀರ್ಪು ನೀಡಿದೆ. ಅದರ ಆಧಾರದ ಮೇಲೆ ಸ್ಥಳೀಯರಿಗೆ ಅಂಗಡಿ ಹಾಕಲು ಅವಕಾಶವಿಲ್ಲ. 230 ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.