ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿದ ನಂತರ ಪಂಚಮಸಾಲಿ ಸಮುದಾಯ 2ಎಗೆ ಸೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಧಾನಸಭೆಯಲ್ಲಿ ಇಂದು ಶೂನ್ಯವೇಳೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಷಯ ಪ್ರಸ್ತಾಪಿಸಿದಾಗ ಉತ್ತರಿಸಿದ ಸಿಎಂ, ವೀರಶೈವರ ಹತ್ತು-ಹಲವು ಪಂಗಡ ಬಿಟ್ಟು ಹೋಗಿದ್ದವು. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಸಂಪುಟ ಉಪ ಸಮಿತಿ ಮಾಡಿದ್ದರು. ನಾನೂ ಕೂಡ ಅದರ ಸದಸ್ಯ ಆಗಿದ್ದೆ. ಹತ್ತು-ಹಲವು ಪಂಗಡಗಳನ್ನು 2ಎಗೆ ಸೇರಿಸಲು ಸರಿಯಾದ ಡೇಟಾ ಇರಲಿಲ್ಲ. ಹಾಗಾಗಿ 3ಬಿನಲ್ಲಿ ಸೇರಿಸಲಾಗಿತ್ತು. ನಂತರ 2ಎ ಹೋರಾಟ ಪಾದಯಾತ್ರೆ ಬಂದಾಗ ಕೂಡಲೇ ಹಿಂದುಳಿದ ವರ್ಗಗಳ ಆಯೋಗಕ್ಕೆ ವರದಿ ನೀಡಲು ಸೂಚಿಸಲಾಗಿದೆ ಎಂದು ಹೇಳಿದರು. ಇದೊಂದು ಕಾನೂನಿನ ಅಂಶವಾಗಿರುವುದರಿಂದ ಸಾಕಷ್ಟು ಸಮಯ ಬೇಕಾಗುತ್ತದೆ. ಆದರೂ ನಮ್ಮ ಸರ್ಕಾರ ನ್ಯಾಯ ಒದಗಿಸಲು ಬದ್ಧವಾಗಿದೆ ಎಂದು ಆಶ್ವಾಸನೆ ನೀಡಿದರು.
ಪಂಚಮಸಾಲಿ ಸಮುದಾಯದ ಮೀಸಲಾತಿಗೆ ಸಂಪೂರ್ಣ ಬೆಂಬಲ:ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಯಡಿಯೂರಪ್ಪ, ನಾನು ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡಲು ಎಲ್ಲಿಯೂ ವಿರೋಧ ವ್ಯಕ್ತಪಡಿಸಿಲ್ಲ. ಮುಖ್ಯಮಂತ್ರಿಯಾಗಿದ್ದಾಗ ಆ ಸಮುದಾಯದ ಹೋರಾಟಕ್ಕೆ ಸಂಪೂರ್ಣ ಬೆಂಬಲ ಕೊಟ್ಟಿದ್ದೆ ಎಂದು ಹೇಳಿದರು.
ವೀರಶೈವ ಲಿಂಗಾಯಿತ ಅಭಿವೃದ್ಧಿ ಪ್ರಾಧಿಕಾರಕ್ಕೂ 500 ಕೋಟಿ ರೂ., ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೂ ಆರ್ಥಿಕ ನೆರವು ಒದಗಿಸಿದ್ದೆ. ವಿವಿಧ ಕ್ಷೇತ್ರಗಳಲ್ಲಿ ಹಿಂದುಳಿದಿರುವ ಈ ಸಮುದಾಯ 2ಎ ಸೇರ್ಪಡೆ ಮಾಡುವ ಕುರಿತು ವರದಿ ನೀಡಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಶಿಫಾರಸ್ಸು ಮಾಡಿದ್ದು ನಾನೇ. ಮುಖ್ಯಮಂತ್ರಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.