ಬೆಂಗಳೂರು:ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ. ಈ ಸಂಬಂಧ ನಾನೇ ಖುದ್ದಾಗಿ ಮುಂದಿನ ತಿಂಗಳು ಭೇಟಿ ನೀಡಿ ಪರಿಶೀಲಿಸುವುದಾಗಿ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದರು.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಬಿಜೆಪಿ ಸದಸ್ಯ ನಿರಂಜನ್ ಕುಮಾರ್ ಸಿ.ಎಸ್. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಸೂಕ್ಷ್ಮ ವಲಯವಾಗಿದೆ. ಹೀಗಾಗಿ ನಾನೇ ಖುದ್ದಾಗಿ ಭೇಟಿ ನೀಡಿ, ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದರು.
ಈಗಾಗಲೇ ಮೇಲುಕಾಮನಹಳ್ಳಿ, ಜಿ.ಎಸ್.ಬೆಟ್ಟದ ಸಫಾರಿ ಕೇಂದ್ರದಲ್ಲಿ ಟಿಕೆಟ್ ಕೌಂಟರ್, ಶೌಚಾಲಯ ಹಾಗೂ ಪ್ರವಾಸಿಗರ ತಂಗುದಾಣ ನಿರ್ಮಾಣ ಮಾಡಲಾಗಿದೆ. ಮೇಲುಕಾಮನಹಳ್ಳಿ ಸಫಾರಿ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ಹಾಗೂ ಕಾಡಿನ ಒಳಪ್ರದೇಶದ ರಸ್ತೆಗಳನ್ನು ಮತ್ತು ವಾಹನ ಪಾರ್ಕಿಂಗ್ ಸ್ಥಳವನ್ನು ಅಭಿವೃದ್ಧಿಪಡಿಸುವ ಕಾಮಗಾರಿ ಪ್ರಗತಿಯಲ್ಲಿವೆ. ಒಟ್ಟಾರೆ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದಲ್ಲಿ ಪ್ರವಾಸಿಗರಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲು ನಾವು ಸಿದ್ಧವಿರುವುದಾಗಿ ಹೇಳಿದರು.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವು ಅರಣ್ಯ ಇಲಾಖೆಯ ಸುಪರ್ದಿಯಲ್ಲಿರುತ್ತದೆ. ಈ ಪ್ರದೇಶದಲ್ಲಿ ಮೂಲ ಸೌಕರ್ಯಗಳು ಮತ್ತು ಇತರ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದು ಅರಣ್ಯ ಇಲಾಖೆಯ ಕಾರ್ಯವ್ಯಾಪ್ತಿಗೆ ಬರುತ್ತದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುತ್ತಿದ್ದು, ಪರಿಸರ ಪ್ರವಾಸೋದ್ಯಮ ಹಾಗೂ ಸಫಾರಿಯಿಂದಾಗಿ ಉತ್ತಮ ಆದಾಯ ಅರಣ್ಯ ಇಲಾಖೆಗೆ ಬರುತ್ತಿದೆ. ಮೂಲ ಸೌಕರ್ಯ ಅಭಿವೃದ್ಧಿಗಾಗಿ ಈ ಆದಾಯವನ್ನು ಬಳಕೆ ಮಾಡಬಹುದಾಗಿದೆ. ಆದಾಗ್ಯೂ 2019-20ನೇ ಸಾಲಿನಲ್ಲಿ ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು, ಅಧ್ಯಕ್ಷರು ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ, 4 ಅಭಿವೃದ್ಧಿ ಕಾಮಗಾರಿಗಳನ್ನು 327.20 ಲಕ್ಷ ರೂಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಪ್ರಸ್ತಾವನೆಯನ್ನು ಇಲಾಖೆಗೆ ಸಲ್ಲಿಸಿದ್ದಾರೆ ಎಂದು ತಿಳಿಸಿದರು.
ಓದಿ : ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಕಾಡು ಪ್ರಾಣಿ ಉಪಟಳ ವಿಷಯ : ಪಕ್ಷಬೇಧ ಮರೆತು ಧ್ವನಿಯೆತ್ತಿದ ಶಾಸಕರು