ಬೆಂಗಳೂರು:ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಗಳು ನಿಯಮಾನುಸಾರ ತಪ್ಪದೇ ಸಭೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಪಿಐಎಲ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು. ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ಈ ಲಿಖಿತ ಮಾಹಿತಿ ಸಲ್ಲಿಸಿದ್ದಾರೆ.
ಹೈಕೋರ್ಟ್ ನಿರ್ದೇಶನದಂತೆ ರಾಜ್ಯದ ಎಲ್ಲ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಗಳು ತುರ್ತು ಸಭೆ ನಡೆಸಬೇಕು. ಸಭೆಯ ನಡಾವಳಿಗಳನ್ನು ಸರ್ಕಾರಕ್ಕೆ ಕಳುಹಿಸಿಕೊಡಬೇಕು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಜುಲೈ. 16ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಹಾಗೆಯೇ ನ್ಯಾಯಾಲಯದ ಆದೇಶದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಕುಂದುಕೊರತೆ ನಿವಾರಣಾ ಘಟಕ ಸ್ಥಾಪಿಸಿ, ಎಸ್ಓಪಿ ಉಲ್ಲಂಘನೆ ಬಗ್ಗೆ ಇ-ಮೇಲ್, ವಾಟ್ಸ್‌ಆ್ಯಪ್ ಮತ್ತು ಸಹಾಯವಾಣಿ ಮೂಲಕ ಸಾರ್ವಜನಿಕರು ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದಲ್ಲಿ ಮಾಸ್ಕ್ ಧರಿಸದ ಹಾಗೂ ಸಾಮಾಜಿಕ ಅಂತರ ಪಾಲಿಸದವರ ವಿರುದ್ಧ ಜುಲೈ. 14ರವಗೆ 1,28 ಲಕ್ಷ ಪ್ರಕರಣಗಳನ್ನು ದಾಖಲಿಸಿದ್ದು, ಒಟ್ಟು 5,37 ಕೋಟಿ ರೂಪಾಯಿ ದಂಡ ಸಂಗ್ರಹಿಸಲಾಗಿದೆ ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್ಗೆ ಮಾಹಿತಿ ನೀಡಿದ್ದಾರೆ.