ಬೆಂಗಳೂರು: ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆ ಪ್ರಕರಣವನ್ನು ಸದ್ಯದಲ್ಲೇ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಗೆ ವಹಿಸುವುದಾಗಿ ಕೇಂದ್ರ ಸರ್ಕಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ.
ಡಿ.ಜೆ ಹಳ್ಳಿ ಗಲಭೆ ಪ್ರಕರಣ ಸದ್ಯದಲ್ಲೇ ಎನ್ಐಎ ಹೆಗಲಿಗೆ: ಕೇಂದ್ರದಿಂದ ಹೈಕೋರ್ಟ್ಗೆ ಮಾಹಿತಿ - ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ
ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆ ಸಂಬಂಧ ಎನ್ಐಎ ವಹಿಸುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನ ಸಲ್ಲಿಸಲಾಗಿದ್ದು, ಈ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸಿದೆ. ಇನ್ನು ಸದ್ಯದಲ್ಲೇ ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸುವುದಾಗಿ ಸರ್ಕಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.
ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದ ತನಿಖೆಯನ್ನು ಉನ್ನತ ಹಂತದ ಸಮಿತಿಗೆ ವಹಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಹಾಗೂ ಘಟನೆಯಲ್ಲಿ ಆಗಿರುವ ನಷ್ಟವನ್ನು ವಸೂಲಿ ಮಾಡಲು ಕ್ಲೇಮು ಕಮಿಷನರ್ ನೇಮಿಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಕೇಂದ್ರದ ಪರ ಹಾಜರಿದ್ದ ಹಿರಿಯ ವಕೀಲ ಎಂ.ಬಿ.ನರಗುಂದ ಅವರು ಪೀಠಕ್ಕೆ ಮಾಹಿತಿ ನೀಡಿ, ಗಲಭೆ ಪ್ರಕರಣದ ಸಂಬಂಧ ದಾಖಲಿಸಿರುವ ಎರಡು ಎಫ್ಐಆರ್ ಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಇನ್ನೊಂದು ವಾರದಲ್ಲಿ ಆದೇಶ ಹೊರಡಿಸಲಿದೆ ಎಂದರು. ಹೇಳಿಕೆ ದಾಖಲಿಸಿಕೊಂಡ ಪೀಠ ವಿಚಾರಣೆ ಮುಂದೂಡಿತು.