ಬೆಂಗಳೂರು:ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆ ಸಂಬಂಧ ದಾಖಲಿಸಿರುವ ಎರಡು ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ತಂಡ (ಎನ್‍ಐಎ)ಕ್ಕೆ ವಹಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಎನ್‍ಐಎ ಪರ ವಕೀಲರು ಹೈಕೋರ್ಟ್‍ಗೆ ಮಾಹಿತಿ ನೀಡಿದ್ದಾರೆ.
ಪ್ರಕರಣವನ್ನು ಎನ್‍ಐಎ ತನಿಖೆಗೆ ವಹಿಸಲು ನಿರ್ದೇಶಿಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಈ ಮಾಹಿತಿ ನೀಡಲಾಗಿದೆ.
ವಿಚಾರಣೆ ವೇಳೆ ಎನ್‍ಐಎ ಪರ ವಕೀಲ ಪಿ. ಪ್ರಸನ್ನಕುಮಾರ್ ಅವರು ಪೀಠಕ್ಕೆ ಮಾಹಿತಿ ನೀಡಿ, ಗಲಭೆ ವೇಳೆ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿದ ಸಂಬಂಧ ಯುಎಪಿಎ ಕಾಯ್ದೆಯಡಿ ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಪೊಲೀಸ್ ಠಾಣೆಯಗಳಲ್ಲಿ ತಲಾ ಒಂದೊಂದು ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ.
(ಅಪರಾಧ ಸಂಖ್ಯೆ 195 ಮತ್ತು 219) ಈ ಪ್ರಕರಣಗಳನ್ನು ಎನ್‍ಐಎಗೆ ವಹಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಕೇಂದ್ರ ಸರ್ಕಾರದಿಂದ ಮೌಖಿಕ ಸೂಚನೆ ಬಂದಿದ್ದು, ಒಂದೆರಡು ದಿನಗಳಲ್ಲಿ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಪೀಠಕ್ಕೆ ತಿಳಿಸಿದರು.