ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಹಿನ್ನಡೆ ಬೆನ್ನಲ್ಲೇ ಕಾಂಗ್ರೆಸ್ ರಾಷ್ಟ್ರೀಯ ನಾಯಕತ್ವ ಬದಲಾವಣೆ ಕೂಗು ಕೇಳಿ ಬರುತ್ತಿರುವ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ರಾಹುಲ್ ಗಾಂಧಿ ಪರವಾಗಿ ಬ್ಯಾಟ್ ಬೀಸಿದ್ದಾರೆ.
ಎಐಸಿಸಿ ಅಧ್ಯಕ್ಷ ಸ್ಥಾನದಿಂದ ರಾಹುಲ್ ಗಾಂಧಿ ಕೆಳಗಿಳಿದ ದಿನದಿಂದಲೂ ರಾಜ್ಯ ಕಾಂಗ್ರೆಸ್ ನಾಯಕರು ಅವರು ಮತ್ತೊಮ್ಮೆ ಅಧ್ಯಕ್ಷಗಾದಿ ಅಲಂಕರಿಸಬೇಕು ಎಂದು ಒತ್ತಾಯಿಸುತ್ತಲೇ ಬಂದಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ನಾಯಕತ್ವದ ಬದಲಾವಣೆ ಆಗಬೇಕು ಎಂಬ ಕೂಗು ಕೇಳಿಬಂದ ಸಂದರ್ಭದಲ್ಲೆಲ್ಲ ರಾಜ್ಯ ಕಾಂಗ್ರೆಸ್ ನಾಯಕರು ಗಾಂಧಿ ಕುಟುಂಬದ ಪರವಾಗಿ ಧ್ವನಿ ಎತ್ತುವ ಕಾರ್ಯ ಮಾಡಿದ್ದಾರೆ. ಈಗಲೂ ಸಹ ರಾಷ್ಟ್ರೀಯ ನಾಯಕತ್ವ ಬದಲಾವಣೆ ಕೇಳಿ ಬರುತ್ತಿರುವ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ರಾಹುಲ್ ಗಾಂಧಿ ಪರವಾಗಿ ಮಾತನಾಡಿದ್ದಾರೆ.
ಪ್ರಸ್ತುತ ದೆಹಲಿಯಲ್ಲೇ ಇರುವ ಡಿಕೆಶಿ, ಟ್ವೀಟ್ ಮೂಲಕ ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿ ಮಾತನಾಡಿದ್ದು, ನಾನು ಮೊದಲೇ ಹೇಳಿದಂತೆ ಎಐಸಿಸಿ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರೇ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಬೇಕು. ಇದು ನನ್ನಂತಹ ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರ ಆಶಯವಾಗಿದೆ ಎಂದು ಹೇಳಿದ್ದಾರೆ.